ಕೂಡಲೇ ಹುಬ್ಬಳ್ಳಿ ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಮಹಾನಗರ ಪಾಲಿಕೆ ರಚನೆಗೆ ಸಂಪುಟ ಅನುಮೋದನೆ ನೀಡಿದ್ದು, ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ಬೆಂಗಳೂರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಬೇಕೆಂಬ ಒತ್ತಾಯ 2014ರಲ್ಲೇ ಕೇಳಿಬಂದಿತ್ತು. ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವ ಕಾರಣ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೆಂದು ಧಾರವಾಡದ ಜನರು, ಹೋರಾಟಗಾರರು ಮತ್ತು ಪಕ್ಷಾತೀತವಾಗಿ ಎಲ್ಲ ಪಕ್ಷಗಳ ಶಾಸಕರು ಆಗ್ರಹಿಸಿದ್ದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ.1 ರಿಂದ 26 ಅನ್ನು ಸೇರಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲಾಗುತ್ತದೆ. ಇನ್ನುಳಿದ ವಾರ್ಡ್ ನಂ.27 ರಿಂದ 82 ರವರೆಗಿನ ಪ್ರದೇಶಗಳನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆಯನ್ನಾಗಿ ಮುಂದುವರೆಸಲು ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ಈ ವರದಿ ಓದಿದ್ದೀರಾ? ಧಾರವಾಡ | ಕ್ಷುಲ್ಲಕ ಕಾರಣಕ್ಕೆ ಗೊಲ್ಲರ ಕಾಲನಿಯಲ್ಲಿ ಹೊಡೆದಾಟ: 6 ಮಂದಿ ಪೊಲೀಸ್ ವಶಕ್ಕೆ
ಇಪಾಲಿಕೆಯ ರಚನೆಗೆ 3.5 ಲಕ್ಷ ಜನಸಂಖ್ಯೆಯ ಮೇಲಿರಬೇಕು. ಹೀಗಾಗಿ, ಇದೀಗ ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಘೋಷಿಸಲು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದಾರೆ.