ಸಮಾಜದಲ್ಲಿ ಮೂಢನಂಬಿಕೆಯಿಂದ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗುತ್ತಿದ್ದು, ಮೌಢ್ಯತೆಯ ತಪ್ಪು ಕಲ್ಪನೆಗಳಿಂದ ಹೆಣ್ಣು ಮಗುವಿನ ಮೇಲೆ ತಾತ್ಸಾರ ಮತ್ತು ತಿರಸ್ಕಾರದ ಭಾವನೆ ತಾಳುವುದು ಬೇಡ ಎಂದು ಧಾರವಾಡದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಹೇಳಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಜಿಲ್ಲೆಯಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿಗಳಿಗೆ ಪಿಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ 1994 ರ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಹೆಣ್ಣು ಮಗುವಿನ ಹತ್ಯೆ ಪ್ರಕರಣಗಳು ಅತಿ ಹೆಚ್ಚು ಬೆಳಕಿಗೆ ಬರುತ್ತಿದ್ದು, ಇಂತಹ ಪ್ರಕರಣಗಳ ವಿರುದ್ಧ ಧ್ವನಿ ಎತ್ತಬೇಕು ಎಂದರು.
ಬಸವಣ್ಣ, ಅಕ್ಕಮಹಾದೇವಿ, ಸಾವಿತ್ರಿಬಾಯಿ ಪುಲೆ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅನೇಕ ಮಹಾನ ವ್ಯಕ್ತಿಗಳು ಮಹಿಳೆಯರ ಶಿಕ್ಷಣ ಹಕ್ಕು, ಸಮಾನತೆ ಹಾಗೂ ಮಹಿಳೆಯರಿಗೆ ಸಮಾಜದಲ್ಲಿ ಉತ್ತಮ ಸ್ಥಾನಮಾನ ದೊರಕಿಸುವಲ್ಲಿ ಹೆಚ್ಚು ಆದ್ಯತೆ ನೀಡಿದ್ದರು. ಮೂಢನಂಬಿಕೆ ಮತ್ತು ತಪ್ಪು ಕಲ್ಪನೆಗಳಿಂದ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಹೆಚ್ಚಾಗುತ್ತಿದೆ. ಭ್ರೂಣ ಹತ್ಯೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರಿಂದ ಭ್ರೂಣ ಹತ್ಯೆಗಳನ್ನು ತಡೆಯಬಹುದು ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಮಾತನಾಡಿ, ಭ್ರೂಣ ಹತ್ಯೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಭ್ರೂಣ ಹತ್ಯೆಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ ಮಾತನಾಡಿ, ಶಿಕ್ಷಣದಿಂದ ಬದಲಾವಣೆ ಕಾಣಬಹುದು. ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಮ್ಮ ಮನೆಯಿಂದಲೇ ಪ್ರಾರಂಭಿಸಬೇಕು. ಭ್ರೂಣ ಹತ್ಯೆ ತಡೆಗಟ್ಟಲು ಸಮಾಜದಲ್ಲಿ ಉತ್ತಮ ಸಂದೇಶವನ್ನು ಬಿತ್ತರಿಸುವ ಕೆಲಸವಾಗಬೇಕು ಎಂದರು.
ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ಡಾ.ಯೋಗೇಂದ್ರ ಕಬಾಡಿ ಅವರು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಕೇಂದ್ರಗಳು ನಿರ್ವಹಿಸಬೇಕಾದ ದಾಖಲಾತಿಗಳು ಹಾಗೂ ವಿವರದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅರವಳಿಕೆ ತಜ್ಞ ಹಾಗೂ ವೈದ್ಯಕೀಯ ಸಲಹೆಗಾರ ಡಾ. ಶಿವಕುಮಾರ ಕುಂಬಾರ ಪಿಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯ ಕುರಿತು ಉಪನ್ಯಾಸ ನೀಡಿದರು.
ಇದನ್ನು ಓದಿದ್ದೀರಾ? ಧಾರವಾಡ | ಮಳೆಗೆ ಭಾರಿ ಬೆಳೆಹಾನಿ; 100ಕ್ಕೂ ಹೆಚ್ಚು ಮನೆಗೆ ನೀರು: ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಜಾತಾ ಮುರಾರಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ ವಂದಿಸಿದರು.
ಜಿಲ್ಲಾ ನೋಡಲ್ ಅಧಿಕಾರಿ ಡಾ. ಮಹೇಶ ಚಿತ್ತರಗಿ ವೇದಿಕೆಯಲ್ಲಿದ್ದರು. ಪೋಲಿಸ್ ಇಲಾಖೆ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನೆಯ ಅಧಿಕಾರಿಗಳು, ಜಿಲ್ಲೆಯ ಖಾಸಗಿ ಮತ್ತು ಸರಕಾರಿ ವೈದ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಹಾಗೂ ಮೇಲ್ವಿಚಾರಕರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.