ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಮಟನ್ ಮಾರುಕಟ್ಟೆ ನಿರ್ಮಾಣ ಸೇರಿದಂತೆ, ಕ್ಷೇತ್ರದ 23 ವಾರ್ಡ್‍ಗಳಲ್ಲಿ ಅಗತ್ಯ ಮೂಲಸೌಕರ್ಯಕ್ಕಾಗಿ 25 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೂಡಲೇ ಪ್ರಸ್ತಾವ ಸಲ್ಲಿಸಬೇಕು ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಭಾನುವಾರ ತಮ್ಮ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಅವರು, ನ್ಯೂ ಇಂಗ್ಲಿಷ್ ಸ್ಕೂಲ್, ಮೇದಾರ ಓಣಿ ಬಳಿ ಇರುವ ಮಟನ್ ಮಾರುಕಟ್ಟೆಯನ್ನು ನೆಲಸಮ ಗೊಳಿಸಿ ಐದು ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಟನ್ ಮಾರುಕಟ್ಟೆ ನಿರ್ಮಾಣ ಮಾಡುವುದು, ಐದು ಕೋಟಿ ರೂ. ವೆಚ್ಚದಲ್ಲಿ ಸಿಸಿ ಟಿವಿ ಕ್ಯಾಮೆರಾ, ಮಂಟೂರು ರಸ್ತೆಯ ಹರಿಶ್ಚಂದ್ರ ಸ್ಮಶಾನದ ಬಳಿ ಎರಡು ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಿದರೆ ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದರು.
ಪ್ರತಿ ಬಾರಿಯೂ ಸಭೆಯಲ್ಲಿ ಹೇಳುವ ವಿಷಯಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಭೆಯಲ್ಲಿ ನೀಡಿದ ಸೂಚನೆಗಳನ್ನು ತಪ್ಪದೆ ಪಾಲಿಸಿ, ವರದಿ ಒಪ್ಪಿಸಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದಾಗ ಕ್ಷೇತ್ರದ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಅಧಿಕಾರಿಗಳಿಗೆ ಹೇಳಿದರು.
ಮಹಾನಗರ ಪಾಲಿಕೆ ಕಾನೂನು ಸಲಹೆ ವಿಭಾಗ ಬಲಹೀನವಾಗಿದೆ. ಈ ಹಿಂದೆ ಹಲವು ಬಾರಿ ಸೂಚನೆ ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪಾಲಿಕೆ ಆಸ್ತಿಗಳನ್ನು ನಿಯಮಾನುಸಾರ ಬಳಕೆ ಮಾಡದೇ ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆ ಅಧೀಕ್ಷಕ ಎಂಜಿನಿಯರ್ ಬಿ. ತಿಮ್ಮಪ್ಪ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯ್‍ಕುಮಾರ್, ಸಹಾಯಕ ವಲಯ ಆಯುಕ್ತ ಬಸವರಾಜ ಲಮಾಣಿ, ಮನೋಜ್ ಗಿರೀಶ್, ಫಕೀರಪ್ಪ ಇಂಗಳಗಿ ಸಭೆಯಲ್ಲಿ ಇದ್ದರು.