ರಾಜ್ಯಸರ್ಕಾರ ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಯುವನಿಧಿ ಯೋಜನೆ ಜಾರಿಗೆ ಸಿದ್ಧತೆ ನಡೆಯುತ್ತಿದೆ. ಧಾಡವಾಡ ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಆಗಸ್ಟ್ 15ರಂದು ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. “ರಾಜ್ಯ ಸರಕಾರವು ನುಡಿದಂತೆ ನಡೆದಿದ್ದು, ಜನಪರ ಗ್ಯಾರೆಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ” ಎಂದರು.
ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದ್ದು, ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿದೆ. ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ 1.51 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಒಟ್ಟು 3,82,523 ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಉಪಯೋಗವನ್ನು ಪಡೆದುಕೊಳುತ್ತಿದ್ದಾರೆ. ಗೃಹಜ್ಯೋತಿ ಯೋಜನೆ ಅಡಿ ಜಿಲ್ಲೆಯಲ್ಲಿ 4,18,250 ಗ್ರಾಹಕರು ಈಗಾಗಲೇ ಪ್ರಯೋಜನ ಪಡೆದುಕೊಂಡಿರುತ್ತಾರೆ. ಯುವನಿಧಿ ಯೋಜನೆಯನ್ನು ಸದ್ಯದಲ್ಲಿಯೇ ಜಾರಿಗೊಳಿಸಲಾಗುವುದು. ಅನ್ನಭಾಗ್ಯ ಯೋಜನೆಯಡಿ ಯಾರೂ ಸಹ ಹಸಿವಿನಿಂದ ಬಳಲದಂತೆ ಕಾರ್ಯಕ್ರಮವನ್ನು ರೂಪಿಸಲಾಗಿದೆ” ಎಂದರು.
“ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 2.57 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು, ಈ ವರೆಗೆ 1.57 ಲಕ್ಷ ಹೆಕ್ಟೇರ್‍ಗಳಷ್ಟು ಬಿತ್ತನೆಯಾಗಿದೆ. 1.1.2023 ರಿಂದ 2.8.2023 ರವರೆಗೆ 415 ಮಿ.ಮೀ. ವಾಡಿಕೆ ಮಳೆಗೆ 391 ಮಿ.ಮೀ. ಮಳೆಯಾಗಿರುತ್ತದೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 11,300 ಕ್ವಿಂಟಾಲ್ ವಿವಿಧ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ. ಹಾಗೂ 35,807 ಮೆ.ಟನ್‍ಗಳಷ್ಟು ವಿವಿಧ ರಸಗೊಬ್ಬರಗಳನ್ನು ಪೂರೈಸಲಾಗಿದೆ” ಎಂದು ಹೇಳಿದರು.
“ನಮ್ಮ ದೇಶದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನಗಳು ರಾಷ್ಟ್ರದ ಅಸ್ತಿತ್ವ, ಸಾರ್ವಭೌಮತ್ವವನ್ನು ಸಾರುತ್ತಿವೆ ಹಾಗೂ ರಾಷ್ಟ್ರದ ಹಿನ್ನಲೆ, ಕಲ್ಪನೆ ಮತ್ತು ಸಂಸ್ಕøತಿಯನ್ನು ಪ್ರತಿಪಾದಿಸುತ್ತವೆ. ಈ ಹಿನ್ನೆಲೆಯಲ್ಲಿ ಇವುಗಳಿಗೆ ಗೌರವ ತೋರುವುದು, ಗೌರವ ದೊರಕಿಸಿಕೊಡುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ. ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರವರು ರಚಿಸಿದ ಭಾರತದ ಸಂವಿಧಾನವು ರಾಷ್ಟ್ರದ ಆಡಳಿತ ಮತ್ತು ಅಭಿವೃದ್ಧಿಯ ಬುನಾದಿಯಾಗಿದೆ” ಎಂದು ಹೇಳಿದರು.
“ಸ್ವಾತಂತ್ರ್ಯ ಹೋರಾಟದಲ್ಲಿ ಧಾರವಾಡ ಜಿಲ್ಲೆಯಿಂದ ಪ್ರಕಟವಾಗುತ್ತಿದ್ದ ರಾಜಹಂಸ ಪತ್ರಿಕೆ, ಕನ್ನಡ ಕೇಸರಿ ಹಾಗೂ ಇತರೆ ಪತ್ರಿಕೆಗಳ ಪಾತ್ರವು ಬಹಳ ಮುಖ್ಯವಾಗಿದೆ” ಎಂದು ಹೇಳಿದರು.