ಸರಕಾರ ಅನುಷ್ಠಾನ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದರು.
ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಹಳ್ಳಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಕಲ್ಪಿಸಿ, ಶಾಲಾ ಮಕ್ಕಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಅಂತಾರಾಜ್ಯ ಬಸ್‍ಗಳನ್ನು ಕಡಿಮೆ ಮಾಡಿ, ಸ್ಥಳೀಯ ಹಾಗೂ ಹಳ್ಳಿಗಳಿಗೆ ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಮಾಡಿ, ಸಮಸ್ಯೆಗಳು ಆಗದಂತೆ ಸರಿಯಾದ ಕ್ರಮ ಕೈಗೊಳ್ಳಲು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ಕಲಘಟಗಿ ತಾಲೂಕಿನ ದೇವಿಕೊಪ್ಪ ಹಾಗೂ ನವಲಗುಂದ ತಾಲೂಕಿನಲ್ಲಿ ವಿದ್ಯುತ್ ಹಳೆಯ ಕಂಬಗಳು ಹೆಚ್ಚಾಗಿ ಬಾಗಿರುವ ಬಗ್ಗೆ ದೂರುಗಳು ಬಂದಿವೆ. ಇದನ್ನು ಅಧಿಕಾರಿಗಳು ಪರಿಶೀಲಿಸಬೇಕು ಹಾಗೂ ವಿದ್ಯುತ್ ಸರಬರಾಜು ಸರಿಯಾಗಿ ಪೂರೈಸುವಂತೆ ತಿಳಿಸಿದರು.
ಸರಿಯಾದ ಬೋರ್ಡ್ ವ್ಯವಸ್ಥೆ ಇಲ್ಲದಂತಹ ನ್ಯಾಯ ಬೆಲೆ ಅಂಗಡಿ ಗುರುತಿಸಿ, ತಕ್ಷಣವೇ ಬೋರ್ಡ್‍ಗಳನ್ನು ಹಾಕಿಸಬೇಕು. ಕುಂದಗೋಳ ತಾಲೂಕಿನ ನ್ಯಾಯಬೆಲೆ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಆಹಾರ ಮತ್ತು ನಾಗರಿಕ ಸೌಲಭ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಹಳ್ಳಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ರೂ. 2,000 ಹಣವು ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲವೆಂದು ದೂರುಗಳು ದಾಖಲಾಗುತ್ತಿದ್ದು, ಅಂತಹ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಮಾಡಿ, ವರದಿಯನ್ನು ನೀಡುವಂತೆ ತಿಳಿಸಿದರು.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಯಶಸ್ವಿಯಾಗಿ ಯೋಜನೆಗಳು ತಲುಪುವಂತೆ ಜಿಲ್ಲೆಯ ಹಾಗೂ ತಾಲೂಕಿನ ಎಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಗ್ಯಾರಂಟಿ ಯೋಜನೆಯ ಸಮಿತಿ ಸದಸ್ಯರು ತಾಲೂಕು ಮಟ್ಟದಲ್ಲಿ ಸಭೆಗಳನ್ನು ಜರುಗಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಿ ಸರ್ಕಾರದ ಯೋಜನೆಗಳನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಇದನ್ನು ಓದಿದ್ದೀರಾ? ಸಿಎಂ ಸಿದ್ದರಾಮಯ್ಯರನ್ನು ‘ಸಿದ್ದ’ ಎಂದು ಉಲ್ಲೇಖಿಸಿದ ಎನ್‌ಡಿಟಿವಿ; ಭವ್ಯಾ ನರಸಿಂಹಮೂರ್ತಿ ತರಾಟೆ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸ್ವರೂಪ್ ಟಿ.ಕೆ., ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮುರುಗಯ್ಯಾ ವಿರಕ್ತಮಠ, ಅರವಿಂದ ಏಗನಗೌಡರ, ಸುಧೀರ ಬೋಳಾರ ಹಾಗೂ ರತ್ನಾ ತೇಗೂರಮಠ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.