“ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮತದಾನದ ಹಕ್ಕನ್ನು ವೋಟ್ ಚೋರಿ ಮೂಲಕ ಕಸಿದುಕೊಳ್ಳುವ ಕೆಲಸಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ. ಮತದಾರರ ಹಕ್ಕು ಕಸಿಯುವ ಷಡ್ಯಂತ್ರ ಎಸ್ಐಆರ್ ಆಗಿದ್ದು, ಗ್ಯಾನೇಶ್ ಕುಮಾರ್ ವಜಾ ಮಾಡಬೇಕು” ಎಂದು ಎಐಸಿಸಿ ಕಾರ್ಯಕಾರಿ ಸದಸ್ಯ ಕಲ್ಮೇಶ್ ಪಟೇಲ್ ಆರೋಪಿಸಿದರು.
ಧಾರವಾಡ ಜಿಲ್ಲೆಯ ಕುಂದಗೋಳ ನಗರದಲ್ಲಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಬೃಹತ್ ಪ್ರತಿಭಟನಾ ಪಾದಯಾತ್ರೆಯಲ್ಲಿ ಮಾತನಾಡಿದರು.
“ಚುನಾವಣಾ ಆಯೋಗದ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಬಳಸಿಕೊಂಡು ದೇಶದ 13.03 ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಮೂಲಕ ಭ್ರಷ್ಟಾಚಾರ ಎಸಗಲಾಗಿದೆ” ಎಂದು ಆರೋಪಿಸಿದರು.
ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಚಂದ್ರಶೇಖರ ಜುಟ್ಟಲ್ ಮಾತನಾಡಿ, ಕೇಂದ್ರ ಸರ್ಕಾರ ಮತಗಳ್ಳತನದ ಮೂಲಕ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಪವಿತ್ರವಾದದ್ದು. ಅಂತಹ ಹಕ್ಕನ್ನು ಕಸಿದುಕೊಳ್ಳುತ್ತಿರುವ ಗ್ಯಾನೇಶ್ ಕುಮಾರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಪಟ್ಟಣದ ಗಾಳಿ ಮರಿಯಮ್ಮ ದೇವಿ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆ ವಿವಿಧ ಬೀದಿಗಳಲ್ಲಿ ಸಂಚರಿಸಿ ಗಾಂಧಿ ವೃತ್ತದಲ್ಲಿ ಸಮಾವೇಶಗೊಂಡಿತು. ಬಳಿಕ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆಯನ್ನು ಮುಕ್ತಾಯಗೊಳಿಸಲಾಯಿತು.
ವೋಟ್ ಬಚಾವೋ–ದೇಶ್ ಬಚಾವೋ’ ಶೀರ್ಷಿಕೆಯಡಿ, ‘ಗ್ಯಾನೇಶ್ ಕುಮಾರ್ ಹಠಾವೋ–ದೇಶ್ ಬಚಾವೋ’ ಎಂಬ ಘೋಷವಾಕ್ಯದೊಂದಿಗೆ ಪಟ್ಟಣದ ಗಾಳಿ ಮರಿಯಮ್ಮ ದೇವಿ ದೇವಸ್ಥಾನದಿಂದ ಗಾಂಧಿ ವೃತ್ತದವರೆಗೆ ಪಾದಯಾತ್ರೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಹಾಗೂ ಷಣ್ಮುಖ ಶಿವಳ್ಳಿ, ತಾಲೂಕು ಅಧ್ಯಕ್ಷ ಜಗದೀಶ್ ಉಪ್ಪಿನ್, ಗ್ಯಾರಂಟಿ ಸಮಿತಿ ಅಧ್ಯಕ್ಷ ನೆಹರು ಪಾಟೀಲ್, ನಗರ ಘಟಕದ ಅಧ್ಯಕ್ಷ ಸಲಿಂ ಕ್ಯಾಲಕೊಂಡ, ಗೌಡಪ್ಪಗೌಡ ಪಾಟೀಲ್, ಜಾಕಿರ್ ಸನದಿ, ಸತೀಶ್ ಕೊಭ್ಯಯನವ, ಸುರೇಶ ಸವಣೂರ, ಮಲ್ಲಿಕಾರ್ಜುನ ಕಿರೇಸೂರ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



