ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನಾಲ್ಕು ಬಣವೆಗಳು ಹಾಗೂ ಒಂದು ಶೆಡ್ ಸುಟ್ಟು ಭಸ್ಮವಾಗಿವೆ.
ಯಲ್ಲಪ್ಪ ಕಲಿವಾಳ ಅವರಿಗೆ ಸೇರಿದ ಶೆಡ್ ಹಾಗೂ ನಾಲ್ಕು ಬಣವೆಗಳು ಬೆಂಕಿಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದ ಹೊಟ್ಟು ಸುಟ್ಟು ಕರಕಲಾಗಿದೆ. ಈ ಬೆಂಕಿ ಅವಘಡದಿಂದ ಅಂದಾಜು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಮಾಡಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.




