“ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 2 ರಂದು ಬೆಳಿಗ್ಗೆ 9 ಗಂಟೆಗೆ 157 ನೇ ಗಾಂಧಿ ಜಯಂತಿಯನ್ನು ಧಾರವಾಡ ಹೊಸ ಬಸ್ ನಿಲ್ದಾಣ ಹತ್ತಿರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಕ್ರಮವಹಿಸಬೇಕು” ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ. ಅವರು ಹೇಳಿದರು.
ಧಾರವಾಡ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
“ಗಾಂಧೀಜಿ ಜಯಂತಿ ಕಾರ್ಯಕ್ರಮವನ್ನು ನೂತನ ಗಾಂಧಿ ಭವನದಲ್ಲಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮಹಾನಗರ ಪಾಲಿಕೆ ಅಧಿಕಾರಿಗಳು ಗಾಂಧಿ ಭವನ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಹಾಗೂ ಸುತ್ತಲಿನ ಪ್ರದೇಶದ ಸ್ವಚ್ಛತೆ ಕೈಗೊಳ್ಳಬೇಕು. ಗಾಂಧಿ ಜಯಂತಿಯಂದು ಗಾಂಧಿ ಭವನವನ್ನು ಅಲಂಕರಿಸಿ, ಆಕರ್ಷಿಣೀಯವಾಗಿ ಸಿದ್ಧಗೊಳಿಸಬೇಕು ಎಂದು ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.
“ರಜಾ ದಿನವಾಗಿರುವದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಗಾಂಧಿ ವಿಚಾರ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮವಹಿಸಬೇಕು” ಎಂದು ಅವರು ಹೇಳಿದರು.
This video cannot be played in your browser. Open the video directly
“ಕಾರ್ಯಕ್ರಮದಲ್ಲಿ ಗಾಂಧಿ ಪ್ರೀಯ ಭಜನೆಗಳು, ಸರ್ಮಧರ್ಮ ಪ್ರಾರ್ಥನೆ, ವಿಶೇಷ ಉಪನ್ಯಾಸವನ್ನು ಆಯೋಜಿಸಬೇಕು. ಈಗಾಗಲೇ ವಾರ್ತಾ ಇಲಾಖೆಯಿಂದ ಜಿಲ್ಲಾಮಟ್ಟದಲ್ಲಿ ಆಯೋಜಿಸಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪ್ರೌಢಶಾಲಾ ವಿಭಾಗ, ಪಿಯು ಕಾಲೇಜು ವಿಭಾಗ ಮತ್ತು ಪದವಿ ಹಾಗೂ ಸ್ನಾತಕೊತ್ತರ ವಿಭಾಗದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆಗೆ ಕ್ರಮವಹಿಸಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.
“ಗಾಂಧಿ ಭವನದಲ್ಲಿ ಮಹಾತ್ಮ ಗಾಂಧೀಜಿಯವರ ವಿಚಾರಧಾರೆಗಳನ್ನು, ತತ್ವ ಸಿದ್ದಾಂತಗಳನ್ನು ಮತ್ತು ಅವರ ಜೀವನ ಚರಿತ್ರೆಯನ್ನು ಪ್ರತಿಬಿಂಬಿಸುವ ಹಾಗೂ ಮಾರ್ಗದರ್ಶನ ಮಾಡುವ ಕಾರ್ಯಕ್ರಮಗಳನ್ನು ಗಾಂಧೀಜಿ ಪ್ರಣಿತ ಸಂಘ-ಸಂಸ್ಥೆಗಳ, ಶಾಲಾ ಕಾಲೇಜುಗಳ ಸಹಯೋಗದಲ್ಲಿ ಆಯೋಜಿಸಲು ಸೂಚಿಸಲಾಗಿದೆ” ಎಂದು ಅವರು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ನಸೀರಾಬಿ ಶೇಖ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಸಂಜೀವ ಕುಲಕರ್ಣಿ, ಧಾರವಾಡ ತಹಶೀಲ್ದಾರ (ಪ್ರ) ಡಾ. ಡಿ.ಎಚ್. ಹೂಗಾರ, ಮಹಾನಗರ ಪಾಲಿಕೆಯ ವಲಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿ.ಪಂ ಅಧಿಕಾರಿ ಆರ್.ಎಸ್. ಕನವಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೀರಣ್ಣಗೌಡ ಪಾಟೀಲ, ಆಹಾರ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಶಾಲಾ ಮತ್ತು ಶಿಕ್ಷಣ ಇಲಾಖೆ, ಲೋಕೊಪಯೋಗಿ ಇಲಾಖೆ, ಜಿಲ್ಲಾ ಖಾದಿಗ್ರಾಮೋದ್ಯೋಗ ಇಲಾಖೆ ಮತ್ತು ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





