ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ನಗರ ಘಟಕ-1ರ ಚಾಲಕ ಷಡಕ್ಷರಯ್ಯ ಅತ್ತಿಕಟ್ಟಿಮಠ ಅವರಿಗೆ ಸೇರಿದ ಮನೆ ಸೇರಿದಂತೆ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ 15 ಅಧಿಕಾರಿಗಳ ತಂಡ ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ಲೋಹಿಯ ನಗರ, ಗಾಂಧಿನಗರ ಸೇರಿದಂತೆ ಮೂರು ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ಆಸ್ತಿ ದಾಖಲೆ, ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ.
ಪ್ರಾಥಮಿಕ ಪರಿಶೀಲನೆಯಲ್ಲಿ ಅವರ ಹೆಸರಿನಲ್ಲಿ ಮೂರು ಮನೆಗಳಿರುವುದು ಪತ್ತೆಯಾಗಿದೆ.ಪತ್ನಿಯ ಹೆಸರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿ ಅಕ್ರಮವಾಗಿ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳ ಪರಿಶೀಲನೆ ಮುಂದುವರಿದಿದೆ.



