ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.
ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಅಧಿಕ ಶಿಕ್ಷಕರು ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಧಾರವಾಡ ನಗರದ ಆರ್‌ಎಲ್‌ಎಸ್ ಮೈದಾನದಿಂದ ಆರಂಭವಾದ ಮೆರವಣಿಗೆ ಪ್ರಮುಖ ವೃತ್ತಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು.
ಈ ವೇಳೆ ಜ್ಯುಬಿಲಿ ವೃತ್ತ ಮತ್ತು ಕೋರ್ಟ್ ವೃತ್ತ ಬಂದ್ ಮಾಡಿ ಶಿಕ್ಷಕರು ಪ್ರತಿಭಟನೆ ನಡೆಸಿದರು.ಸಭೆಯಲ್ಲಿ ಮಾತನಾಡಿದ ಬಸವರಾಜ ಹೊರಟ್ಟಿ, ಬುಧವಾರದಿಂದ ಅನಿರ್ದಿಷ್ಟಾವಧಿವರೆಗೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಹೋರಾಟ ಮುಂದುವರಿಸುವಂತೆ ಕರೆ ನೀಡಿದರು. ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸಭೆ ಕರೆದು ಪರಿಹಾರ ಕಂಡುಕೊಳ್ಳಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಸಿದರು.
ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಶಿಕ್ಷಕರ ನಡುವೆ ಸರ್ಕಾರ ತಾರತಮ್ಯ ಮಾಡುತ್ತಿದೆ. ಉತ್ತರ ಕರ್ನಾಟಕದಲ್ಲಿ ಶೇ.70ರಷ್ಟು ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಶಿಕ್ಷಣ ನೀಡುತ್ತಿವೆ. ಹೀಗಿರುವಾಗ ಖಾಸಗಿ ಶಾಲೆಗಳ ಶಿಕ್ಷಕರ ಬೇಡಿಕೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ. ಕೂಡಲೇ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ನಾಲ್ಕು ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಪ್ರತಿಭಟನೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಪ್ರೊ. ಎಸ್.ವಿ. ಸಂಕನೂರ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.




