ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಫಲಿತಾಂಶ ಸುಧಾರಿಸುವುದಷ್ಟೇ ಅಲ್ಲ, ಪ್ರತಿಯೊಬ್ಬ ವಿದ್ಯಾರ್ಥಿಯೂ ಶೇ.60ಕ್ಕೂ ಹೆಚ್ಚು ಅಂಕ ಗಳಿಸುವಂತೆ ಸಜ್ಜುಗೊಳಿಸುವುದು ಹಾಗೂ ಪ್ರತಿಯೊಂದು ಶಾಲೆ, ಕಾಲೇಜು ಶೇ.100 ಫಲಿತಾಂಶ ದಾಖಲಿಸುವುದು ಶಿಕ್ಷಣ ಇಲಾಖೆಯ ಗುರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಧಾರವಾಡ ನಗರದ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ಗುಣಾತ್ಮಕ ಫಲಿತಾಂಶ ಸುಧಾರಣೆಗಾಗಿ ಹಮ್ಮಿಕೊಂಡಿದ್ದ ‘ಮಿಷನ್ 60+’ ವಿಭಾಗಮಟ್ಟದ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ವರ್ಷ ಸುಮಾರು 60 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿರುವುದು ಗಂಭೀರ ವಿಚಾರ. ಈ ಬಾರಿ ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾಗದಂತೆ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು.
ವಿದ್ಯಾರ್ಥಿಗಳ ಹಾಜರಾತಿ, ಕಲಿಕಾ ಸಾಮರ್ಥ್ಯ ಮತ್ತು ಪರೀಕ್ಷಾ ಸಿದ್ಧತೆಯ ಮೇಲೆ ನಿರಂತರ ನಿಗಾ ಇರಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಸೂಚಿಸಿದರು.ಕಳೆದ ಸಾಲಿನಲ್ಲಿ ಫಲಿತಾಂಶ ಸುಧಾರಣೆಗೆ ಜಾರಿಗೊಳಿಸಿದ್ದ ‘ಮಿಷನ್ 40+’ ಕಾರ್ಯಕ್ರಮವನ್ನು ಈ ಬಾರಿ ಮತ್ತಷ್ಟು ವಿಸ್ತರಿಸಿ ‘ಮಿಷನ್ 60+’ ರೂಪದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೇವಲ ಉತ್ತೀರ್ಣಗೊಳಿಸುವುದಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ಈ ಯೋಜನೆಯ ಪ್ರಮುಖ ಆಶಯವಾಗಿದೆ ಎಂದರು.ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಇಂತಹ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು.
ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಅನುಕೂಲವಾಗುವಂತೆ ಮಾದರಿ ಪ್ರಶ್ನೆಪತ್ರಿಕೆಗಳು, ನೀಲನಕ್ಷೆ ಸೇರಿದಂತೆ ಅಗತ್ಯ ಕಲಿಕಾ ಸಂಪನ್ಮೂಲಗಳನ್ನು ಒದಗಿಸಲಾಗುತ್ತದೆ. ಸಂಪನ್ಮೂಲ ಶಿಕ್ಷಕರ ಮೂಲಕ ಉಳಿದ ಶಿಕ್ಷಕರಿಗೂ ಮಾರ್ಗದರ್ಶನ ನೀಡಿ, ವಿದ್ಯಾರ್ಥಿಗಳನ್ನು ವ್ಯವಸ್ಥಿತವಾಗಿ ಸಿದ್ಧಗೊಳಿಸಲಾಗುವುದು ಎಂದು ತಿಳಿಸಿದರು.
ಪರೀಕ್ಷಾ ಫಲಿತಾಂಶದ ಸುಧಾರಣೆ ಅಂಕಗಳ ಹೆಚ್ಚಳಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕಾ ಸಾಮರ್ಥ್ಯ ಹೆಚ್ಚಿಸಿ, ಪರೀಕ್ಷೆಯಲ್ಲಿ ಆತ್ಮವಿಶ್ವಾಸದಿಂದ ಪಾಲ್ಗೊಳ್ಳುವಂತೆ ಮಾಡುವುದು ಮುಖ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂಬುದು ಮಿಷನ್ 60+ ಕಾರ್ಯಕ್ರಮದ ಆಶಯವಾಗಿದೆ.




