“ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಜಾ ಸೇವೆ ಇಲಾಖೆಯನ್ನು ಸ್ಥಾಪಿಸಿದೆ. ಆ ಮೂಲಕ ಜನರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲಾಗುವುದು” ಎಂದು ಕಾರ್ಮಿಕ, ಉದ್ಯೋಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.
ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಜನತಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಸಭೆಗೆ ಕಾರ್ಮಿಕ, ಉದ್ಯೋಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಚಾಲನೆ ನೀಡಿ ಮಾತನಾಡಿದರು.
“ಜನರ ಮನೆ ಬಾಗಿಲಿಗೆ ಸರ್ಕಾರ ತೆರಳಲಿದೆ. ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲೇ ಪರಿಹರಿಸಲು ಕ್ರಮ ವಹಿಸಲಾಗುವುದು. ನಿಗದಿತ ಸಮಯದಲ್ಲಿ ಜನರ ಅಹವಾಲುಗಳನ್ನು ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಸಹ ಪ್ರಜಾ ಸೇವಾ ಆಂದೋಲನ ಸಭೆ ನಡೆಸಲಾಗುತ್ತದೆ”ಎಂದು ಅವರು ತಿಳಿಸಿದರು.
ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, “ನಮ್ಮ ಸರ್ಕಾರ ಜನರ ಪರವಾಗಿದೆ. ಜನರ ಕಣ್ಣಿರು ಒರೆಸುವ ಕೆಲಸ ಮಾಡುತ್ತದೆ. ಜನರಿಗೆ ಪ್ರಾಮಾಣಿಕ ಸೇವೆ ಸಲ್ಲಿಸಬೇಕು. ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ರೈತರು, ಕಾರ್ಮಿಕರು, ಮಹಿಳೆಯರ ಸಮಸ್ಯೆಗಳನ್ನು ಆಲಿಸಬೇಕಿದೆ. ನಿಗದಿತ ಸಮಯದಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ಅವರು ತಿಳಿಸಿದರು.
ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿ, “ಜನರ ಹತ್ತಿರ ಸರ್ಕಾರ ತಲುಪಬೇಕು. ಆ ನಿಟ್ಟಿನಲ್ಲಿ ರಾಜ್ಯದಾದ್ಯಂತ ಪ್ರಜಾ ಸೇವಾ ಆಂದೋಲನ ಸಭೆ ನಡೆಸಲಾಗುವುದು. ಈಗಾಗಲೇ ಸುಮಾರು 42 ಕ್ಕೂ ಅಧಿಕ ಅರ್ಜಿಗಳನ್ನು ಜನರು ಸಲ್ಲಿಸಿದ್ದಾರೆ. ಜನರ ಅರ್ಜಿಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಈಗಾಗಲೇ ರಾಜ್ಯದ 101 ತಾಲೂಕು ಹಾಗೂ ನಿನ್ನೆ 24 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇನ್ನಷ್ಟು ತಾಲೂಕುಗಳನ್ನು ಬರಗಾಲ ತಾಲೂಕುಗಳು ಎಂದು ಘೋಷಣೆ ಮಾಡಲಾಗುವುದು” ಎಂದರು.
ಶಾಸಕ ಎಫ್.ಎಚ್.ಜಕ್ಕಪ್ಪನವರ ಮಾತನಾಡಿ, “ಜನರ ಬಾಗಿಲಿಗೆ ಸರ್ಕಾರ ಹೋಗಲಿದೆ. ಜನರ ಬಳಿಗೆ ಸರ್ಕಾರ ಹೋಗಿ ಸೇವೆಗಳನ್ನು ತಲುಪಿಸಲಾಗುವುದು. ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಪರಿಹರಿಸುವ ಕೆಲಸಗಳು ಆಗಬೇಕಿವೆ. ಪ್ರತಿ ದಿನ ತಾಲೂಕು ಕಚೇರಿ ಹಾಗೂ ಜಿಲ್ಲಾ ಕಚೇರಿಯಲ್ಲಿ ಜನರ ಸಮಸ್ಯೆಗಳನ್ನು ದಾಖಲಿಸಿ ಶೀಘ್ರದಲ್ಲೇ ಬಗೆಹರಿಸಬೇಕು. ಅಧಿಕಾರಿಗಳು ಪ್ರಜೆಗಳ ಸೇವೆ ಮಾಡಲು ಬದ್ಧರಾಗಬೇಕು. ಹೈನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ. ರಾಜ್ಯ ಸರ್ಕಾರ ಮೋಡ ಬಿತ್ತನೆಗೆ ಮುಂದಾಗಿದೆ. ಎಲ್ಲರ ಮನೆಮನೆಗೆ ಪ್ರಜಾ ಸೇವೆ ತಲುಪಬೇಕು” ಎಂದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಆರ್.ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕುಮಾರ್ ಟಿ.ಎಚ್.ಎಂ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿದರು. ಗೌರಿ ನಿರೂಪಿಸಿದರು.





