ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ವ್ಯಕ್ತಿತ್ವವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಮಂಗಳವಾರ ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪ್ರತಿಯೊಬ್ಬ ಯಶಸ್ವಿ ಸಾಧಕನ ಹಿಂದೆ ಒಬ್ಬ ಶಿಕ್ಷಕರು ಇರುತ್ತಾರೆ. ಸಮಾಜವನ್ನು ಬದಲಾವಣೆ ಮಾಡಬೇಕಾದರೆ ಶಿಕ್ಷಕರ ಪಾತ್ರ ಬಹು ಮುಖ್ಯ. ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳು ಚಿಂತನೆಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳೋಣ. ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದರೆ ಸಂವಿಧಾನ ಅತ್ಯವಶ್ಯಕವಾಗಿದೆ ಅದನ್ನು ಅರಿತು ನಾವೆಲ್ಲರೂ ಇಂದು ನಡೆಯಬೇಕಾಗಿದೆ” ಎಂದು ಅವರು ಹೇಳಿದರು.
“ಸಮಾಜದಲ್ಲಿನ ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಲು ಮಕ್ಕಳಿಗೆ ತಿಳುವಳಿಕೆ ಮತ್ತು ಗುಣಮಟ್ಟದ ಶಿಕ್ಷಣವನ್ನು ಶಿಕ್ಷಕರು ನೀಡಬೇಕು. ಶಿಕ್ಷಕ ವೃತ್ತಿಗೆ ಸೇರಿ, ಸೇವೆ ಸಲ್ಲಿಸುತ್ತಿರುವ ನೀವು ಸುದೈವಿಗಳು, ಆದ್ದರಿಂದ ಎಲ್ಲ ಶಿಕ್ಷಕರು ಗುಣಮಟ್ಟದ ಮತ್ತು ನೈತಿಕ ಶಿಕ್ಷಣಕ್ಕೆ ಮತ್ತು ನೂತನ ಕೌಶಲ್ಯಗಳಿಗೆ ಆದ್ಯತೆ ನೀಡಿ ವಿದ್ಯಾರ್ಥಿಗಳಿಗೆ ಕಲಿಸಬೇಕು” ಎಂದರು.
ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಮುರಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮಿ ಉಪಸ್ಥಿತರಿದ್ದರು. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಫ್ ಚುಳಕಿ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಯಟ್ ನಿವೃತ್ತ ಪ್ರಾಚಾರ್ಯ ಎನ್.ಕೆ. ಸಾಹುಕಾರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಯೋಜನಾ ಉಪ ಸಮನ್ವಯ ಅಧಿಕಾರಿ ಎಸ್.ಎಂ. ಹುಡೆದಮನಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಫ್.ವಿ.ಮಂಜಣ್ಣನವರ, ಪ್ರೌಢ ಶಾಲೆ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಜಿ.ಬಶೆಟ್ಟಿ ಹಾಗೂ ಇಲಾಖೆಯ ವಿಷಯ ಪರಿವೀಕ್ಷಕರು, ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.