ಜಿಲ್ಲೆಯಲ್ಲಿ ಜರುಗಲಿರುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ದೋಷರಹಿತವಾಗಿ, ವ್ಯವಸ್ಥಿತವಾಗಿ ಹಾಗೂ ಸಮರ್ಥವಾಗಿ ಜರುಗಿಸಲು ಅಗತ್ಯದ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸದರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನ್ಯಾಯೋಚಿತವಾಗಿ ಮತ್ತು ಸುಗುಮವಾಗಿ ನಡೆಸಲು ಅನುವಾಗುವಂತೆ ಜಿಲ್ಲೆಯಲ್ಲಿನ ಎಲ್ಲಾ ಪರೀಕ್ಷಾ ಕೇಂದ್ರಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ಕೊಡದೆ, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ನಿಗದಿಪಡಿಸಿರುವ ಅಭ್ಯರ್ಥಿಗಳ ಸಂಖ್ಯೆಗೆ ಅನುಸಾರವಾಗಿ, ಪ್ರತೀ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳಬೇಕು.
ಪ್ರತಿಯೊಬ್ಬ ಅಭ್ಯರ್ಥಿಯನ್ನು ಅವರುಗಳ ಗುರುತಿನ ಚೀಟಿಯೊಂದಿಗೆ ಪರಿಶೀಲಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅನುಮತಿಸುವುದು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರಗಳು ಇರುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ದಿನಗಳಂದು ಪರೀಕ್ಷೆಗೆ ಹಾಜರಾಗುವ ಮತ್ತು ಗೈರಾಗುವ ಅಭ್ಯರ್ಥಿಗಳ ವಿವರಗಳನ್ನು ಆನ್‌ಲೈನ್ ಮೂಲಕ ದಾಖಲಿಸಲು ಪರೀಕ್ಷಾ ಕೇಂದ್ರದ ಪ್ರಾಂಶುಪಾಲರುಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲ್ಲಿರುವ ಪರೀಕ್ಷೆಗಳಿಗೆ ಸರ್ಕಾರದ ನಿರ್ದೇಶನದಂತೆ, ಖಾಲಿ ಇರುವ ಹುದ್ದೆಗಳ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅಕ್ಟೋಬರ್ 28 ಮತ್ತು 29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. ಅಕ್ಟೋಬರ್ 29ರಂದು ದ್ವಿತೀಯ ದರ್ಜೆ ಸಹಾಯಕರು, ಕಿರಿಯ ಸಹಾಯಕರ ಸ್ಪರ್ಧಾತ್ಮಕ ಪರೀಕ್ಷೆಯ ಮೊದಲನೆಯ ಪತ್ರಿಕೆ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30 ಹಾಗೂ ದ್ವಿತೀಯ ಪತ್ರಿಕೆಯು ಮಧ್ಯಾಹ್ನ 02.30ರಿಂದ 04.30ರ ವರೆಗೆ ನಡೆಯಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಂಬಾಳಿಮಠ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು, ನೋಡಲ್ ಅಧಿಕಾರಿಗಳು ಹಾಜರಿದ್ದರು.