ಶಿಕ್ಷಣದಿಂದ ಮಾತ್ರ ತಳವರ್ಗ ಸಮುದಾಯಗಳ ಏಳಿಗೆ ಸಾಧ್ಯ ಎಂಬ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಮ್ಮ ಗ್ರಾಮದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯ ಶಿಕ್ಷಕ ನಾಗಶೆಟ್ಟಿ ಗಾದಗೆ ಅಭಿಪ್ರಾಯಪಟ್ಟರು.
ಬೀದರ್ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, “ನಮ್ಮ ಗ್ರಾಮದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೌಲ್ಯ ಶಿಕ್ಷಣಕ್ಕಾಗಿ ಮುಂದಿನ ದಿನಗಲ್ಲಿ ಇನ್ನಷ್ಟು ಶ್ರಮಿಸಲಾಗುವುದು” ಎಂದು ಭರವಸೆ ನೀಡಿದರು.
ಗ್ರಾಮ ಪಂಚಾಯತ್ ಸದಸ್ಯ ಯೇಸುದಾಸ ಮಾತನಾಡಿ, “ಬಾಬಾ ಸಾಹೇಬರು ನೀಡಿದ ಸಂವಿಧಾನ ಹಕ್ಕಿನಿಂದ ನಾವೆಲ್ಲರೂ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗಿದೆ. ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಬದಲಾವಣೆಗೆ ಅಂಬೇಡ್ಕರ್ ಅವರ ಚಿಂತನೆಗಳು ಅಡಿಪಾಯವಾಗಿವೆ. ನಾವು ಅವರ ಆದರ್ಶಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಳ್ಳೋಣ” ಎಂದರು.
ಸಂಜೀವ ರತ್ನಾಕರ್ ಪ್ರಾಸ್ತಾವಿಕವಾಗಿ ಮಾತನಾಡಿ, “ಸಮಾಜ ಬದಲಾವಣೆಗೆ ಶಿಕ್ಷಣ ಒಂದು ಅಸ್ತ್ರ. ಶಿಕ್ಷಣದಿಂದ ಎಲ್ಲವೂ ಸಾಧಿಸಬಹುದು ಎನ್ನುವುದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಉದಾಹರಣೆ ಆಗಿದ್ದಾರೆ. ಮಕ್ಕಳಿಗೆ ಉತ್ತಮ ಸಂಸ್ಕಾರ ಜೊತೆ ಗುಣಮಟ್ಟ ಶಿಕ್ಷಣಕ್ಕೆ ನಾವೆಲ್ಲರೂ ಒತ್ತು ಕೊಡಬೇಕು” ಎಂದು ನುಡಿದರು.
ಇದೇ ಸಂದರ್ಭದಲ್ಲಿ ಪಿಯುಸಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕವಾಗಿ ಸಾಧನೆಗೈದು ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮದ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈತ್ಯಶಕ್ತಿ, ಮೋದಿಯ ಮೋಡಿ ಮತ್ತು ದಂಗಾದ ಜನ
ಕಾರ್ಯಕ್ರಮದಲ್ಲಿ ಪ್ರಮುಖರಾದ ಗ್ರಾ.ಪಂ. ಸದಸ್ಯ ನಾಗಪ್ಪ ಹಾರೂರಗೇರಿಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯರಾದ ಬಂಡಯ್ಯಾ ಸ್ವಾಮಿ, ಸಿದ್ದಾರೆಡ್ಡಿ , ಶಾಮಣ್ಣಾ ಸೇರಿದಂತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪವನ್ ಕುಮಾರ ರತ್ನಾಕರ್ ಸ್ವಾಗತಿಸಿದರು, ಆಕಾಶ ಹಾರೂರಗೇರಿಕರ್ ವಂದಿಸಿದರು.