ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ಪ್ಲಾಸ್ಟಿಕ್ ಬಳಕೆ ನಿಷೇಧ, ಹಸಿ-ಒಣ ಕಸ ವಿಂಗಡಣೆ, ವಿಶೇಷ ಕಾಳಜಿ ತ್ಯಾಜ್ಯ ಹಾಗೂ ನಗರ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಜಾಥಾ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್ ಜಿ. ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ ಜಾಗೃತಿ ಜಾಥಾ ಅತ್ಯಂತ ಪ್ರಶಂಸನೀಯ ಕಾರ್ಯವಾಗಿದ್ದು, ಪ್ಲಾಸ್ಟಿಕ್ ಮಾಲಿನ್ಯವು ಇಂದು ವಿಶ್ವ ಎದುರಿಸುತ್ತಿರುವ ಗಂಭೀರ ಪರಿಸರ ಸಮಸ್ಯೆಯಾಗಿದೆ ಎಂದು ಹೇಳಿದರು.
ಪ್ಲಾಸ್ಟಿಕ್‌ನ ಅತಿಯಾದ ಬಳಕೆಯಿಂದ ಪರಿಸರ, ಜಲಮೂಲಗಳು ಹಾಗೂ ಜೀವಜಗತ್ತಿನ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಈ ಹಾನಿಯನ್ನು ತಡೆಗಟ್ಟಲು ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ಭಾರತ ಸರ್ಕಾರ ಈಗಾಗಲೇ ಏಕಬಳಕೆಯ ಪ್ಲಾಸ್ಟಿಕ್ ನಿಷೇಧ ಜಾರಿಗೊಳಿಸಿದ್ದು, ಅದರ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸಾರ್ವಜನಿಕರು ಸಹಕರಿಸಬೇಕು. ಪ್ಲಾಸ್ಟಿಕ್ ಚೀಲಗಳ ಬದಲಾಗಿ ಬಟ್ಟೆ ಅಥವಾ ಸೆಣಬಿನ ಚೀಲಗಳನ್ನು ಬಳಸುವುದು, ಅಂಗಡಿಗಳಿಗೆ ತೆರಳುವಾಗ ಸ್ವಂತ ಚೀಲ ಕೊಂಡೊಯ್ಯುವುದು ಹಾಗೂ ಮರ, ಬಿದಿರು ಮತ್ತು ಮಣ್ಣಿನಿಂದ ತಯಾರಿಸಿದ ಉತ್ಪನ್ನಗಳಿಗೆ ಆದ್ಯತೆ ನೀಡುವುದು ಅಗತ್ಯ ಎಂದು ಸಲಹೆ ನೀಡಿದರು.
ಸರ್ಕಾರದ ನಿಯಮಗಳು ಕೇವಲ ಕಾಗದದ ಮೇಲಷ್ಟೇ ಉಳಿಯದೆ ಪ್ರತಿಯೊಬ್ಬ ನಾಗರಿಕರೂ ಜವಾಬ್ದಾರಿಯಿಂದ ಪಾಲಿಸಬೇಕು. ವಿದ್ಯಾರ್ಥಿಗಳು ಹಾಗೂ ಯುವಜನರು ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಭವಿಷ್ಯದ ಪೀಳಿಗೆಗೆ ಸ್ವಚ್ಛ ಮತ್ತು ಸುರಕ್ಷಿತ ಪರಿಸರವನ್ನು ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣದತ್ತ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಿ. ಸುರೇಶ್ ಮಾತನಾಡಿ, ಸ್ವಚ್ಛ ಭಾರತ್ ಮಿಷನ್-ನಗರ 2.0 ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ದೇಶದ ಎಲ್ಲಾ ನಗರಗಳನ್ನು ಕಸಮುಕ್ತಗೊಳಿಸುವುದು, ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಹಾಗೂ ಹಸಿರು ಪರಿಸರ ನಿರ್ಮಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.
2021ರ ಅಕ್ಟೋಬರ್ 1ರಂದು ಆರಂಭಗೊಂಡ ಈ ಯೋಜನೆಯಡಿ ಮನೆಮನೆಗೆ ಕಸ ಸಂಗ್ರಹಣೆ, ಮೂಲದಲ್ಲಿಯೇ ಹಸಿ ಮತ್ತು ಒಣ ಕಸ ವಿಂಗಡಣೆ, ಶೇಕಡಾ 100ರಷ್ಟು ತ್ಯಾಜ್ಯ ನಿರ್ವಹಣೆ ಹಾಗೂ ಮರುಬಳಕೆ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಯೋಜನೆಯಿಂದ ಸ್ವಚ್ಛ, ಆರೋಗ್ಯಕರ ಮತ್ತು ರೋಗಮುಕ್ತ ನಗರಗಳ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಈ ವಿಶೇಷ ಸುದ್ದಿ ಓದಿದ್ದೀರಾ?ಎಸ್‌ಐಆರ್ ಪ್ರಕ್ರಿಯೆ ಪ್ರಜಾಪ್ರಭುತ್ವಕ್ಕೆ ಸವಾಲು: ಲಕ್ಷಾಂತರ ಮತದಾರರ ಹಕ್ಕು ಕಸಿಯುವ ಹುನ್ನಾರ
ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಅಧ್ಯಕ್ಷ ವಿನಯ್, ಕಾರ್ಯದರ್ಶಿ ಸ್ವಾಮಿ, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಮಧು, ಹರೀಶ್, ಕಚೇರಿ ಸಿಬ್ಬಂದಿ, ಪೌರಕಾರ್ಮಿಕರು, ಆದಿಚುಂಚನಗಿರಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.





