2025ನೇ ಸಾಲಿನಲ್ಲಿ ವೈದ್ಯಕೀಯ ಪ್ರವೇಶಾತಿ ಕಲ್ಪಿಸಲು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯು(ನೀಟ್) ರಾಜ್ಯಾದ್ಯಂತ ಮೇ 4 ರಂದು ನಡೆಯುತ್ತಿದ್ದು, ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.
ಬೆಂ.ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೀಟ್ ಪರೀಕ್ಷೆ ಸಂಬಂಧ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ ಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು, ಮಾದಗೊಂಡನಹಳ್ಳಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾಲ್ಲೂಕು ಕಚೇರಿ ರಸ್ತೆಯ ಸರ್ಕಾರಿ ಪದವಿ ಕಾಲೇಜು(ಪ್ರೌಢಶಾಲಾ ವಿಭಾಗ) ಸೇರಿದಂತೆ ಒಟ್ಟು ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ NEET ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಮೇ 4ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01.30ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯೊಂದಿಗೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಹಾಜರಾಗಬೇಕು ಎಂದರು.
ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ತೆರಳಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ಪ್ರವೇಶ ಪತ್ರದಲ್ಲಿ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. NEET ಪರೀಕ್ಷೆಯಲ್ಲಿ ಯಾವುದೇ ಅಕ್ರಮವಾಗದಂತೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಭದ್ರತೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಹೇಳಿದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯವಸ್ಥೆ, ಸಿ.ಸಿ ಕ್ಯಾಮೆರಾ ಅಳವಡಿಕೆ, ಆಂಬುಲೆನ್ಸ್ ಸೇವೆ , ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ಅಂಗವಿಕಲರು, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವ್ಹೀಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಅಗ್ನಿಶಾಮಕ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮವಹಿಸಬೇಕು. ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಮಾರ್ಗಸೂಚಿ ಅನ್ವಯ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಬೈಲಾಂಜನಪ್ಪ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ನರೇಂದ್ರ ಬಾಬು, ಇತರರು ಉಪಸ್ಥಿತರಿದ್ದರು.