ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳನ್ನು ಒದಗಿಸುವ ಉದ್ದೇಶದಿಂದ ಇಲಾಖೆಗಳ ಸಮನ್ವಯದೊಂದಿಗೆ ಗ್ರಾಮ ಮಟ್ಟದಲ್ಲಿ ಅರಿವು ಹಾಗೂ ಸೌಲಭ್ಯ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಿಎಂ ಜನ್ ಮನ್ ಹಾಗೂ ದರ್ತಿ ಅಬಾ ಜನ್ ಜಾತಿಯ ಗ್ರಾಮ ಉತ್ಕರ್ಷ್ ಅಭಿಯಾನ ಯೋಜನೆಯಡಿ ‘ಜನ್ ಭಾಗೀದಾರಿ ಸಬ್ಸೆ-ಡೋರ್ ಸಬ್ಸೆ ಪೆಹಲೆ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಹಾಗೂ ಇತರೆ ಗಣ್ಯರು ದರ್ತಿ ಅಬಾ ಯೋಜನೆಗಳ ಮಾಹಿತಿಯನ್ನು ಒಳಗೊಂಡ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದರು. ಜೊತೆಗೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಜನನ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಜಿಲ್ಲೆಯಲ್ಲಿ ಶೇ.50ಕ್ಕಿಂತ ಹೆಚ್ಚು ಪರಿಶಿಷ್ಟ ಪಂಗಡದ ಜನಸಂಖ್ಯೆ ಹೊಂದಿರುವ ಗ್ರಾಮಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿನ ಬೆಡಗುಳಿ, ಕಣ್ಣೇಗಾಲ, ಯಾನಗಹಳ್ಳಿ, ಮೇಲ್ ಮಾಳ, ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ, ಸೋಮನಪುರ, ಮದ್ದೂರು, ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ, ಬಿ. ಕಂದಹಳ್ಳಿ ಹಾಗೂ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮಗಳು ಯೋಜನೆಯ ವ್ಯಾಪ್ತಿಗೆ ಒಳಪಟ್ಟಿವೆ.
ಈ ಸುದ್ದಿ ಓದಿದ್ದೀರಾ?ನಂಜನಗೂಡು | ಭದ್ರಾವತಿ ಧರಣಿಗೆ ಬೆಂಬಲ; ಬೀದರ್ ಅತ್ಯಾಚಾರ-ಕೊಲೆ ಪ್ರಕರಣ ಖಂಡನೆ
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗಣ್ಯರು ಇದ್ದರು.




