ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ವಿವಿಧ ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿ ಬದಿ ವ್ಯಾಪಾರಸ್ಥರು ಮತ್ತು ಇತರೆ ಆಹಾರ ವ್ಯಾಪಾರಿಗಳನ್ನು ಭೇಟಿ ನೀಡಿ ಆಹಾರ ಉದ್ದಿಮೆಗಳನ್ನು ಪರಿಶೀಲನೆ ನಡೆಸಿದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡದೇ ಇರುವ ಒಟ್ಟು 23 ವ್ಯಾಪಾರಿಗಳಿಗೆ ನೋಟಿಸ್ ಜಾರಿ ಮಾಡಿ, 20 ಸಾವಿರ ರೂ. ದಂಡ ವಿಧಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತರ ಸೂಚನೆಯಂತೆ ಆಗಸ್ಟ್ 30 ಮತ್ತು 31 ರಂದು ಎರಡು ದಿನಗಳ ಕಾಲ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಜಿಲ್ಲೆಯಲ್ಲಿ ಆಂದೋಲನ ಹಮ್ಮಿಕೊಳ್ಳಲಾಗಿತ್ತು.
ಆಹಾರ ಸಿದ್ಧಪಡಿಸುವ ಸ್ಥಳ, ವ್ಯಾಪಾರದ ಸ್ಥಳಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ತಮ್ಮ ಆರೋಗ್ಯವು ಸಹ ಉತ್ತಮವಾಗಿರಬೇಕು ಎಂದು ಆಹಾರ ವ್ಯಾಪಾರಿಗಳಿಗೆ ಸಲಹೆ ನೀಡಿದರು. ಆಹಾರ ಪದಾರ್ಥಗಳ ತಯಾರಕರು, ಮಾರಾಟಗಾರರು, ದಾಸ್ತಾನುದಾರರು ಶುಚಿತ್ವಕ್ಕೆ ಒತ್ತು ನೀಡಬೇಕು. ಗ್ರಾಹಕರಿಗೆ ಶುದ್ಧವಾದ ಆಹಾರವನ್ನು ಮತ್ತು ನೀರನ್ನು ಪೂರೈಸಬೇಕು. ಆಹಾರ ಉದ್ದಿಮೆಗಳಲ್ಲಿ ಕೆಲಸ ಮಾಡುವ ಎಲ್ಲಾ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳತಕ್ಕದ್ದು ಎಂದು ಅಧಿಕಾರಿಗಳು ಜಾಗೃತಿ ಮೂಡಿಸಿದರು.
ಆಹಾರಕ್ಕೆ ಕೃತಕ ಬಣ್ಣಗಳನ್ನು ಬಳಸಬಾರದು. ಮೊಟ್ಟೆ, ಮೀನು, ಮಾಂಸದ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ ಬಳಕೆ ಮಾಡುವಂತಾಗಬೇಕು ಎಂದು ಅಧಿಕಾರಿಗಳು ಆಹಾರ ಉದ್ದಿಮೆದಾರರಿಗೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಕ್ಷಿಣ ಭಾರತ ಒಗ್ಗಟ್ಟು ಪ್ರದರ್ಶಿಸಲು ಇದು ಸಕಾಲ? Mekedatu Dam Project | Cauvery Dispute
ಆಂದೋಲನದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ, ಹೋಸಕೋಟೆ ತಾಲ್ಲೂಕು ಆಹಾರ ಸುರಕ್ಷತೆ ಅಧಿಕಾರಿ ಗೋವಿಂದರಾಜು, ದೇವನಹಳ್ಳಿ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ಪ್ರವೀಣ್, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ನಾಗೇಶ್ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.