ಮಂಡ್ಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐರಾವತ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾಥ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.
ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಘಟನೆ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಐರಾವತ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ, ಕಾರು ನಜ್ಜು-ಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.
ಮೃತರನ್ನು ಸತ್ಯಾನಂದ ರಾಜೇ ಆರಸ್ (51), ಅವರ ಪತ್ನಿ ನಿಶ್ಚಿತಾ (45), ಚಂದ್ರು (62), ಅವರ ಪತ್ನಿ ಸುವೇದಿನಿ ರಾಣಿ (50) ಎಂದು ಗುರುತಿಸಲಾಗಿದೆ.
ಈ ವರದಿ ಓದಿದ್ದೀರಾ?: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಬೆಂಬಲ, ವಿರೋಧ: ಏನಿದು ವಿವಾದ?
ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ – ಸಾವಿನ ರಸ್ತೆಯೆಂದೇ ಕರೆಸಿಕೊಂಡಿತ್ತು. ಪೊಲೀಸ್ ಇಲಾಖೆಯ ಅಂಕಿಅಂಶದ ಪ್ರಕಾರ, 2023ರಲ್ಲಿ 523 ರಸ್ತೆ ಅಪಘಾತಗಳು ಸಂಭವಿಸಿದ್ದವು. ಈ ಅಪಘಾತಗಳಲ್ಲಿ 158 ಜನರು ಸಾವನ್ನಪ್ಪಿದ್ದರು. ಅಲ್ಲದೆ, 350ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇನ್ನು, 2024ರಲ್ಲಿ ಜನವರಿಯಿಂದ ಮೇ ಅಂತ್ಯದವರೆಗೆ 125 ಅಪಘಾತಗಳು ಸಂಭವಿಸಿ, 31 ಮಂದಿ ಸಾವಿಗೀಡಾಗಿದ್ದರು. 167 ಮಂದಿ ಗಾಯಗೊಂಡಿದ್ದರು. 2024ರ ಮೇ ನಂತರದ ಅಂಕಿಅಂಶಗಳನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.