“ಗದಗ ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17 ರಂದು ಜರುಗುವ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ತಿಳಿಸಿದರು.
ಗದಗ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಕುರಿತು ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ, ಅವ್ಯವಹಾರ, ಲೋಪದೋಷಗಳು ಆಗದಂತೆ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಶಿಸ್ತು ಮತ್ತು ಜವಾಬ್ದಾರಿಯಿಂದ ನಿರ್ವಹಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, “ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು ತೆಗೆದುಕೊಂಡು ಹೋಗುವಂತಿಲ್ಲ. ಅಭ್ಯರ್ಥಿಗಳು ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಎಲೆಕ್ಟಾçನಿಕ್ಸ್ ಉಪಕರಣಗಳು, ಮೊಬೈಲ್ ಫೋನ್ , ಬ್ಲೂಟೂಥ್, ಸೈಡ್ ರೂಲ್ಸ್, ಕ್ಯಾಲ್ಕ್ಯುಲೇಟರ್ , ವೈಟ್ ಪ್ಲುಯಿಡ್ , ವೈರ್ಲೆಸ್ ಸೆಟ್ಸ್ , ಪೇಪರ್ ಚೀಟಿ, ಬುಕ್/ ಪುಸ್ತಕ ಇತ್ಯಾದಿಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ ಅವರು ಮಾತನಾಡಿ ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು 13 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ. 3615 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಗಮವಾಗಿ ಜರುಗಲು ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಪ್ರತಿಬಂಧಕಾಜ್ಞೆ ಜಾರಿ: ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಏಪ್ರಿಲ್ 16 ಮತ್ತು 17 ರಂದು ಬೆ 8.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಹಾವೇರಿ | ಸರ್ಕಾರ ದಿಡೀರ್ ಬೆಲೆ ಏರಿಕೆ : ಕರವೇ ಸ್ವಾಭಿಮಾನಿ ಬಣ ಖಂಡನೀಯ
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆರ್.ಎಸ್.ಬುರುಡಿ, ಡಯಟ್ ಪ್ರಾಂಶುಪಾಲರು ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
