ಗದಗ ಜಿಲ್ಲೆಯಲ್ಲಿ ನಿಂರತರವಾಗಿ ಮಳೆ ಸುರಿಯುತ್ತಿರುವುದರಿಂದ ಉಂಟಾಗುವ ಪ್ರವಾಹ ಹಾಗೂ ಅತಿವೃಷ್ಟಿ ಪರಿಸ್ಥಿತಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದರು.
“ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿರುತ್ತದೆ. ತಗ್ಗು ಪ್ರದೇಶದಲ್ಲಿನ ಜನ, ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಂದರ್ಭಾನುಸಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳುವಳಿಕೆ ನೀಡಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಗುರುತಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನ ಒಲಿಸುವುದರ ಮೂಲಕ ಸಂಭವನೀಯ ಜೀವ ಹಾನಿ ತಡೆಗಟ್ಟಲು ಅಗತ್ಯವಿರುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ತಿಳಿಸಿದರು.
“ನಿರಂತರ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರುಡುವ ಸಂಭವವಿದ್ದು, ಜನ ಸಾಮಾನ್ಯರು ಶುದ್ಧ ಕುಡಿಯುವ ನೀರಿನ ಬಳಕೆ ಮಾಡುವಂತೆ ಅರಿವು ಮೂಡಿಸಬೇಕು. ಕುಡಿಯುವ ನೀರಿನ ಶುದ್ಧತೆ ಕುರಿತು ಅನುಮಾನವಿದ್ದಲ್ಲಿ ತಕ್ಷಣವೇ ನೀರನ್ನು ಪರೀಕ್ಷೆಗೊಳಪಡಿಸಬೇಕು. ಹಾಗೂ ಆರೋಗ್ಯ ಸುರಕ್ಷತೆಗಾಗಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.
“ಮಳೆ ನೀರು ಸರಾಗವಾಗಿ ಹರಿದು ಹೋಗಲು ಅನುಕೂಲವಾಗುವಂತೆ ಗ್ರಾಮಗಳಲ್ಲಿನ ಚರಂಡಿ, ಕಾಲುವೆಗಳನ್ನು ಸ್ವಚ್ಛಗೊಳಿಸಬೇಕು. ಅಲ್ಲದೇ ರೈತರು ತಮ್ಮ ಜಾನುವಾರುಗಳನ್ನು ವಿದ್ಯುತ್ ಕಂಬಳಿಗೆ ಕಟ್ಟದಂತೆ ಹಾಗೂ ಗ್ರಾಮಗಳಲ್ಲಿನ ಕೆರೆ, ನದಿ ದಡಕ್ಕೆ ಸಾರ್ವಜನಿಕರು, ಜಾನುವಾರುಗಳನ್ನು ಒಯ್ಯದಂತೆ ಜಾಗೃತಿ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
“ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಯೋಜನೆ ರೂಪಿಸಿಕೊಂಡು ಜನ, ಜಾನುವಾರು ಜೀವ ಹಾನಿಯಾಗದಂತೆ ಎಲ್ಲ ಇಲಾಖೆಗಳೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸಬೇಕು ಹಾಗೂ ಗ್ರಾಮಗಳ ಪ್ರವಾಹ ಪರಿಸ್ಥಿತಿ ಕುರಿತು ಮೇಲಾಧಿಕಾರಿಗಳಿಗೆ ಕಾಲ ಕಾಲಕ್ಕೆ ಮಾಹಿತಿ ಒದಗಿಸಬೇಕು” ಎಂದು ಜಿಲ್ಲಾಧಿಕಾರಿ ವೈಶಾಲಿ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ನಿರಂತರ ಮಳೆಯಿಂದ 192 ಮನೆಗಳು ಹಾನಿ
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಮುಖ್ಯ ಯೋಜನಾಧಿಕಾರಿ ವಾಗೀಶ, ಯೋಜನಾ ನಿರ್ದೇಶಕ ಎಂ ವಿ ಚಳಗೇರಿ ಸೇರಿದಂತೆ ತಾ ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.