ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಸ್ವಂತ ಆದಾಯ ಗಳಿಸುವ ಸಾಮರ್ಥ್ಯ ಬೆಳೆಸಿಕೊಂಡು, ಕುಟುಂಬ ಹಾಗೂ ಸಮಾಜದ ಆರ್ಥಿಕ ನಿರ್ಧಾರಗಳಲ್ಲಿ ಸ್ವತಂತ್ರವಾಗಿ ಪಾಲ್ಗೊಳ್ಳುವಂತಾಗುವುದೇ ನಿಜವಾದ ಮಹಿಳಾ ಆರ್ಥಿಕ ಸಬಲೀಕರಣ ಎಂದು ಸಂಪನ್ಮೂಲ ವ್ಯಕ್ತಿ ಕವಿತಾ ದಂಡಿನ ಅಭಿಪ್ರಾಯಪಟ್ಟರು.
ಗದಗ ಜಿಲ್ಲೆಯ ರೋಣ ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಧರ್ಮಸ್ಥಳ, ರೋಣ ತಾಲೂಕು ಯೋಜನಾ ಕಚೇರಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ‘ಆರ್ಥಿಕ ಸಬಲೀಕರಣದಲ್ಲಿ ಮಹಿಳೆಯರ ಪಾತ್ರ’ ವಿಷಯದ ಕುರಿತು ಉಪನ್ಯಾಸ ನೀಡಿದರು.
“ಮಹಿಳೆಯರ ಆರ್ಥಿಕ ಸಬಲೀಕರಣವೆಂದರೆ ಕೇವಲ ಹಣ ಸಂಪಾದಿಸುವುದಕ್ಕೆ ಸೀಮಿತವಾದುದಲ್ಲ. ಮಹಿಳೆಯರಲ್ಲಿ ಆತ್ಮಗೌರವ, ಸ್ವಾಭಿಮಾನ ಹಾಗೂ ಸ್ವತಂತ್ರ ನಿರ್ಧಾರ ಕೈಗೊಳ್ಳುವ ಶಕ್ತಿಯನ್ನು ಬೆಳೆಸುವುದರ ಜೊತೆಗೆ ಸಮಾಜದಲ್ಲಿ ಅವರ ಸ್ಥಾನಮಾನವನ್ನು ಹೆಚ್ಚಿಸುವ ಮಹತ್ವದ ಸಾಧನೆಯಾಗಿದೆ. ಮಹಿಳೆಯರು ಆರ್ಥಿಕವಾಗಿ ಸದೃಢರಾದಾಗ ಕುಟುಂಬದ ಅಭಿವೃದ್ಧಿಯೊಂದಿಗೆ ಸಮಾಜದ ಪ್ರಗತಿಯೂ ಸಾಧ್ಯವಾಗುತ್ತದೆ” ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪಳ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ, “ಮಹಿಳಾ ಸ್ವಾವಲಂಬನೆಯೇ ನಮ್ಮೆಲ್ಲರ ಗುರಿಯಾಗಬೇಕು. ಇಂದಿನ ಮಹಿಳೆಯರು ಆರ್ಥಿಕ ಕ್ಷೇತ್ರದಲ್ಲಿ ಪುರುಷರಿಗೆ ಸರಿಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಬದುಕಿನಲ್ಲಿ ಆಶಾಕಿರಣ ಮೂಡಿಸುವ ಮೂಲಕ ಅವರ ಸರ್ವತೋಮುಖ ಅಭಿವೃದ್ಧಿಗೆ ನೆರವಾಗುತ್ತಿದೆ” ಎಂದರು.
ಮುಖ್ಯ ಅತಿಥಿ ಮಹಿಳಾ ಧುರೀಣೆ ಸಂಯುಕ್ತಾ ಬಂಡಿ ಮಾತನಾಡಿ, “ಮಹಿಳೆಯರು ಹಿಂಜರಿಕೆಯ ಮನೋಭಾವ ತೊರೆದು ಆತ್ಮವಿಶ್ವಾಸದಿಂದ ತಮ್ಮ ಕಾರ್ಯಕ್ಷೇತ್ರದಲ್ಲಿ ಮುನ್ನಡೆಯಬೇಕು. ಟ್ರಸ್ಟ್ ವತಿಯಿಂದ ದೊರೆಯುವ ವಿವಿಧ ಸೌಲಭ್ಯ ಹಾಗೂ ಸಹಾಯಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು” ಎಂದು ಕರೆ ನೀಡಿದರು.
ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಶಿಕಲಾ ಪಾಟೀಲ ವಹಿಸಿದ್ದರು. ಸ್ಟೇಟ್ ಬ್ಯಾಂಕ್ ಪ್ರಬಂಧಕಿ ಸಂಧ್ಯಾ ಸಂಪತ,ಗದಗ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಮಾತನಾಡಿದರು.
ವೇದಿಕೆಯಲ್ಲಿ ಗದಗ ಜಿಲ್ಲಾ ಜನಜಾಗೃತಿ ವೇದಿಕೆಯ ಡಾ. ವೀರೇಶ ಸತ್ತಿಗೇರಿ, ಪ್ರವೀಣಕುಮಾರ ರಡ್ಡೇರ ಉಪಸ್ಥಿತರಿದ್ದರು. ಯೋಜನಾಧಿಕಾರಿ ಮಹಾಬಲೇಶ್ವರ ಪಟಗಾರ ಸೇರಿದಂತೆ ಜ್ಞಾನವಿಕಾಸ ಕೇಂದ್ರಗಳ ಸಮನ್ವಯಾಧಿಕಾರಿಗಳು, ಮೇಲ್ವಿಚಾರಕರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸೇವಾ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



