ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7ರಂದು ಮತದಾನ ಜರುಗಲಿದ್ದು, ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಜರುಗಿದ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸ್ವೀಪ್ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
“ಪ್ರಜಾಪ್ರಭುತ್ವ ಬಲಿಷ್ಠಗೊಳಿಸಲು ಮತದಾನವು ಪ್ರಮುಖ ಪಾತ್ರ ವಹಿಸಲಿದ್ದು, ಈ ನಿಟ್ಟಿನಲ್ಲಿ ಅರ್ಹ ಮತದಾರರು ಮತದಾನ ಮಾಡಲು ಹೆಚ್ಚಿನ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣ, ರೇಲ್ವೆ, ಬ್ಯಾಂಕ್, ಆಸ್ಪತ್ರೆಗಳು ಸೇರಿದಂತೆ ವಿವಿಧ ಪ್ರಮುಖ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಮತದಾನದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಜರುಗುವ ಜಾತ್ರೆ, ಉತ್ಸವ, ಸಂತೆಗಳಲ್ಲಿಯೂ ಕೂಡಾ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
“ಒಟ್ಟಾರೆಯಾಗಿ ಎಲ್ಲ ಅರ್ಹ ಮತದಾರರೂ ಕಡ್ಡಾಯವಾಗಿ ಮತದಾನ ಮಾಡಲು ಕ್ರಮ ವಹಿಸಬೇಕು” ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ ಎಸ್ ನೇಮಗೌಡ ಮಾತನಾಡಿ, “ಜಿಲ್ಲೆಯಿಂದ ವಲಸೆ ಹೋದವರ ಕುರಿತು ಮಾಹಿತಿ ಸಂಗ್ರಹಿಸಿ ಅವರೂ ಕೂಡ ಕಡ್ಡಾಯವಾಗಿ ಮತದಾನ ಮಾಡಲು ಅವರನ್ನು ಪ್ರೋತ್ಸಾಹಿಸಬೇಕು” ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, “ಅರ್ಹರ ಪ್ರತಿಯೊಂದು ಮತವೂ ಅತ್ಯಮೂಲ್ಯವಾಗಿದ್ದು, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಮತದಾನದ ಮಹತ್ವ ಕುರಿತು ಬ್ಯಾನರ್ ಅಳವಡಿಸುವುದು ಹಾಗೂ ವಾಹನಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಲು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ʼಬಿಜೆಪಿ ಹಠಾವೋ, ದೇಶ್ ಬಚಾವೋʼ ಘೋಷದೊಂದಿಗೆ ಸಿಪಿಐ ರಾಜಕೀಯ ಸಮಾವೇಶ
ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್ ಎಸ್ ನೀಲಗುಂದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎ ರಡ್ಡೇರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.