ಗದಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು ಮುಂಗಾರು ಆರಂಭದವರೆಗೆ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಗದಗ ಜಿಲ್ಲೆಯಲ್ಲಿ ಕುಡಿಯುವ ನೀರು ನಿರ್ವಹಣೆ, ಮೇವಿನ ಪೂರೈಕೆ, ಬಿಸಿಗಾಳಿ ಕುರಿತು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರʼ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತುಂಗಭದ್ರಾ ಮತ್ತು ಮಲಪ್ರಭಾ ನದಿ ಮೂಲಗಳಿಂದ ಕುಡಿಯುವ ನೀರು ಪೂರೈಕೆ, ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ, ಬೋರ್‍ವೆಲ್ ಮೂಲಕ ಕುಡಿಯುವ ನೀರು ಪೂರೈಕೆ ಹೀಗೆ ವಿವಿಧ ಮೂಲಗಳಿಂದ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಈ ಬಗ್ಗೆ ಗಮನ ಹರಿಸಬೇಕು. ಕುಡಿಯುವ ನೀರು ಸಂಗ್ರಹ ಮತ್ತಿತರ ಬಗ್ಗೆ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಅವರು ಸುದೀರ್ಫವಾಗಿ ಚರ್ಚಿಸಿದರು.
ಕುಡಿಯುವ ನೀರು ಪೂರೈಕೆ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಕುಡಿಯುವ ನೀರು ಸರಬರಾಜಿನಲ್ಲಿ ಸಾರ್ವಜನಿಕರಿಂದ ದೂರು ಬಾರದಂತೆ ಗಮನ ಹರಿಸುವುದು ಅಧಿಕಾರಿಗಳ ಪ್ರಥಮ ಆದ್ಯತೆ ಆಗಬೇಕು. ಕುಡಿಯುವ ನೀರಿನ ಪೂರೈಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು.
ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು. ತಾಲೂಕು ಮಟ್ಟದಲ್ಲಿ ತಹಸೀಲ್ದಾರರು, ತಾಲೂಕು ಪಂಚಾಯತ್ ಇ.ಒಗಳು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಹಾಗೂ ಪಿಡಿಒಗಳ ಜೊತೆ ಸಭೆ ನಡೆಸಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಕುಡಿಯುವ ನೀರು ಪೂರೈಕೆಯಲ್ಲಿನ ನಿರ್ವಹಣೆಯನ್ನು ಸರಿಯಾಗಿ ನಿಭಾಯಿಸಬೇಕು. ಪೈಪ್‍ಲೈನ್‍ಗಳನ್ನು ಆಗಾಗ ಪರಿಶೀಲಿಸಬೇಕು. ಕುಡಿಯುವ ನೀರು ಪೂರೈಸುವುದರ ಜೊತೆಗೆ ಗುಣಮಟ್ಟದ ಬಗ್ಗೆಯೂ ಪ್ರತಿನಿತ್ಯ ಪರಿಶೀಲಿಸಬೇಕು. ಯಾವುದೇ ಕಾರಣಕ್ಕೂ ಉದಾಸೀನ ತೋರಬಾರದು ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಸಂಬಂಧ ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಕುಡಿಯುವ ನೀರು ಪೂರೈಕೆ ಸಂದರ್ಭದಲ್ಲಿ ಛಾಯಾಚಿತ್ರ ಸಹಿತ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ವ್ಯತ್ಯಯ ಆಗಬಾರದು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮೇವು ಪೂರೈಕೆಯನ್ನು ಸರಿಯಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು.
ಜಿ.ಪಂ.ಸಿ.ಇ.ಒ ಎಸ್.ಭರತ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಹಲವು ಕಡೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ತಾ.ಪಂ.ಇ.ಒಗಳು ಕುಡಿಯುವ ನೀರು ಪೂರೈಕೆ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಸೂಚಿಸಿದರು.
ತಹಸೀಲ್ದಾರರು, ತಾ.ಪಂ.ಇ.ಒಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ನೀರಾವರಿ ಎಂಜನೀಯರ್ ಗಳು ತುಂಗಭದ್ರ ಹಾಗೂ ಮಲಪ್ರಭ ನದಿಗಳಲ್ಲಿನ ನೀರು ಸಂಗ್ರಹ ಬಗ್ಗೆ ಮಾಹಿತಿ ನೀಡಿದರು.
ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಎಂ.ಬಿ.ಸಂಕದ, ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಉಪ ವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ನಗರಸಭೆ ಪೌರಾಯುಕ್ತರಾದ ಪ್ರಶಾಂತ್ ವರಗಪ್ಪನವರ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
