ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರು ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಸಚಿವರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಸಬರಮತಿ ಆಶ್ರಮದ ಪ್ರತಿಕೃತಿಯನ್ನು ಸಂದರ್ಶಿಸಿ, ಅದರ ಮಹತ್ವ ಹಾಗೂ ಆಶಯಗಳನ್ನು ವೀಕ್ಷಿಸಿದರು. ಅಲ್ಲದೆ, ಆಶ್ರಮದ ಸಮೀಪದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ವೀಕ್ಷಿಸಿದರು.
ಬಳಿಕ ವಿಶ್ವವಿದ್ಯಾಲಯದ ವಿವಿಧ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳ ಕುರಿತು ಮಾಹಿತಿ ಪಡೆದು ಅವಲೋಕನ ನಡೆಸಿದರು. ವಿಶ್ವವಿದ್ಯಾಲಯವು ಕೈಗೊಂಡಿರುವ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಅಮರೇಶ್ ಯತಗಲ್, ಹಣಕಾಸು ಅಧಿಕಾರಿಗಳಾದ ಶ್ರೀ ಪ್ರಶಾಂತ್ ಜೆ.ಸಿ. ಹಾಗೂ ವಿಶ್ವವಿದ್ಯಾಲಯದ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.



