ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಜಾರ್ ರಸ್ತೆಯ ಸಿಸಿ ಟೆಂಡರ್ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನಾಕಾರರು ಗದಗ ಜೆಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಅಧಿಕಾರಿಗೆ ಮನವಿ ಸಲ್ಲಿಸಿದರು.
“ಬಜಾರ್ ರಸ್ತೆಯ ಚೌಡಿಯಿಂದ ಕೆಂಚಲಾಪೂರ್ ಓಣಿವರೆಗೆ ಈ ಹಿಂದೆ ಸಿಸಿ ರಸ್ತೆ ಟೆಂಡರ್ ಆಗಿದ್ದು, ಈ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಯಾವ ಉದ್ದೇಶಕ್ಕಾಗಿ ಸ್ಥಗಿತವಾಗಿದೆ ಎಂಬುದನ್ನು ತಿಳಿಸಬೇಕು. ಜತಗೆ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸಿ ಜನರಿಗೆ ಅನುಕೂಲವಾಗುವಂತೆ ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ರಮೇಶ್ ಹಂಗನಕಟ್ಟಿ ಮಾತನಾಡಿ, “ಲಕ್ಷ್ಮೇಶ್ವರ ನಗರದ ವ್ಯಾಪಾರಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಿರುವ ರಸ್ತೆಯ ಕಾಮಗಾರಿಯನ್ನು ಗುತ್ತಿಗೆದಾರರು ಅರ್ಧಕ್ಕೆ ನಿಲ್ಲಿಸಿದ್ದಾರೆ. ಈ ಕಾಮಗಾರಿಯಿಂದ ಮಳೆಗಾಲದಲ್ಲಿ ಗುಂಡಿಗಳು ಬಿದ್ದು ಶಾಲಾ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ” ಎಂದರು.
“ಪುರಸಭೆ ಮುಖ್ಯ ಅಧಿಕಾರಿಗಳು, ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರುಗಳ ಗಮನಕ್ಕೆ ತಂದು ಈ ಕಾಮಗಾರಿಯನ್ನು ಪ್ರಾರಂಭಿಸಬೇಕು. ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.
“ಮನವಿಗೆ ಸ್ಪಂದನೆ ಇಲ್ಲವಾದಲ್ಲಿ ಮುಂದಿನ ದಿನಮಾನಗಳಲ್ಲಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದಿಂದ ಲಕ್ಷ್ಮೇಶ್ವರ ಪುರಸಭೆ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಮುಖಂಡರು, ಅನೇಕ ಮಂದಿ ಕಾರ್ಯಕರ್ತರು ಇದ್ದರು.