ಕರ್ನಾಟಕ ಸುವರ್ಣ ಸಂಭ್ರಮ -50ರ ಅಂಗವಾಗಿ ಬಾಲಪ್ರತಿಭೆಗಳಿಗೆ ಪ್ರೋತ್ಸಾಹಿಸಲು ಗದಗನಲ್ಲಿ ಚಿಗುರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಮುಂಡರಗಿ ರಸ್ತೆಯಲ್ಲಿನ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶುಕ್ರವಾರ (ಡಿ.08) ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಚಿಗುರು ಕಾರ್ಯಕ್ರಮವು ಒಂದು ಉತ್ತಮ ವೇದಿಕೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಇಂತಹ ಸಾಂಕ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಬಾಲ ಪ್ರತಿಭೆಗಳಿಗೆ ಸೂಕ್ತ ವೇದಿಕೆ. ಇಲಾಖೆಯಿಂದ ಹಮ್ಮಿಕೊಳ್ಳಲಾಗುವ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಸದುಪಯೋಗ ಎಲ್ಲರೂ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಪ್ರೊ. ಎಸ್.ವೈ.ಚಿಕ್ಕಟ್ಟಿ, ಪ್ರಾಚಾರ್ಯ ವಿನಯ ಚಿಕ್ಕಟ್ಟಿ, ವಿವಿಧ ಕಲಾ ತಂಡಗಳ ಕಲಾವಿದರು, ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.