“ಸಂವಿಧಾನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಾತ್ರ ಸೀಮಿತವಾಗಿಲ್ಲ. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ಸಹಕಾರಿಯಾಗಿದೆ. ಸಮಾಜದಲ್ಲಿ ಶಾಂತಿ, ಸುರಕ್ಷತೆ ಹಾಗೂ ಸುವ್ಯವಸ್ಥೆ ನೆಲೆಸಲು ಸಂವಿಧಾನವೇ ಪ್ರಮುಖ ಆಧಾರವಾಗಿದೆ. ಹೀಗಾಗಿ ಸಂವಿಧಾನದ ಆಶಯಗಳನ್ನು ಅರಿತು, ಅವುಗಳ ಸಾಕಾರಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು” ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು.
ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ (26)ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
“ಸಂವಿಧಾನದ ಮೂಲಕ ಹೆಚ್ಚಿನ ಪ್ರಯೋಜನ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿದವರೇ ಸಂವಿಧಾನ ದಿನಾಚರಣೆಯಿಂದ ದೂರ ಉಳಿಯುತ್ತಿರುವುದು ಖೇದಕರ ಹಾಗೂ ವಿಷಾದನೀಯ ಸಂಗತಿಯಾಗಿದೆ. ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನ ದಿನಾಚರಣೆ ಕೇವಲ ಸಮಾಜ ಕಲ್ಯಾಣ ಇಲಾಖೆಗೆ ಸೀಮಿತವಾಗಬಾರದು. ಕಾನೂನು ಇಲಾಖೆಯೂ ಸಕ್ರಿಯವಾಗಿ ಭಾಗವಹಿಸಿ ಮುಂದಿನ ದಿನಗಳಲ್ಲಿ ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.
“ಜಗತ್ತಿನ ವಿವಿಧ ರಾಷ್ಟ್ರಗಳ ಸಂವಿಧಾನಗಳ ಸರಾಸರಿ ಬಾಳಿಕೆ ಸುಮಾರು 19 ವರ್ಷಗಳಷ್ಟಿದೆ. ಆದರೆ, ಭಾರತ ಸಂವಿಧಾನವು 77 ವರ್ಷಗಳಾದರೂ ಸದೃಢವಾಗಿ, ಬಲಿಷ್ಠವಾಗಿ ಮುನ್ನಡೆಯುತ್ತಿದೆ. ಇದು ನಮ್ಮ ಸಂವಿಧಾನದ ಶ್ರೇಷ್ಠತೆ ಮತ್ತು ಗಟ್ಟಿತನಕ್ಕೆ ಸಾಕ್ಷಿಯಾಗಿದೆ. ಸಂವಿಧಾನವು ಕೇವಲ ಆಡಳಿತಾತ್ಮಕ ಕಾನೂನು ದಾಖಲೆಯಲ್ಲ, ಅದೊಂದು ಸಾಮಾಜಿಕ ಕೃತಿಯಾಗಿದೆ. ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ರಾಷ್ಟ್ರೀಯ ಭಾವನೆ ಮೂಡಿಸುವ ಶಕ್ತಿ ಸಂವಿಧಾನಕ್ಕಿದೆ” ಎಂದು ಹೇಳಿದರು.
“ಸ್ವಾತಂತ್ರ್ಯ ಪೂರ್ವದಲ್ಲಿ ದೇಶದಲ್ಲಿ ಅಸ್ಪೃಶ್ಯತೆ ಸೇರಿದಂತೆ ಹಲವು ಸಾಮಾಜಿಕ ಅಸಮಾನತೆಗಳು ವ್ಯಾಪಕವಾಗಿ ನೆಲೆಸಿದ್ದವು. ಸಂವಿಧಾನದ ಜಾರಿಯ ನಂತರ ಸಮಾಜದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸಿವೆ. ಪ್ರತಿಯೊಬ್ಬರಿಗೂ ಸಮಾನ ಹಕ್ಕು, ಅವಕಾಶ ಮತ್ತು ಗೌರವ ದೊರೆಯಲು ಸಂವಿಧಾನ ದಾರಿದೀಪವಾಗಿದೆ. ಸಂವಿಧಾನದ ಆಶಯಗಳ ಮೇಲೆ ಎಲ್ಲರಿಗೂ ಪ್ರೀತಿ ಮತ್ತು ಗೌರವ ಇರಬೇಕು. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆಯ ಸಮಾಜ ನಿರ್ಮಿಸಬೇಕು” ಎಂದರು.
“ಸಮರ್ಥ ಹಾಗೂ ಚಾರಿತ್ರ್ಯವಂತ ವ್ಯಕ್ತಿಗಳಿಂದ ಮಾತ್ರ ಸದೃಢ ಸಮಾಜ ಮತ್ತು ರಾಷ್ಟ್ರ ನಿರ್ಮಾಣ ಸಾಧ್ಯ. ಸಂವಿಧಾನದ ಆಶಯಗಳನ್ನು ಅರಿತವರು ಉತ್ತಮ ಆಡಳಿತ ನೀಡಲು ಸಮರ್ಥರಾಗಿರುತ್ತಾರೆ. ಆದ್ದರಿಂದ ಸಂವಿಧಾನದ ಮೌಲ್ಯಗಳನ್ನು ತಿಳಿದುಕೊಂಡು ಅದರ ಮಾರ್ಗದಲ್ಲಿ ಮುನ್ನಡೆಯಬೇಕು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ರಾಜೇಂದ್ರ ಪ್ರಸಾದ್ ಅವರ ಆದರ್ಶಗಳನ್ನು ಅರಿತು ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯೋಣ” ಎಂದು ಕರೆ ನೀಡಿದರು.
ಇದಕ್ಕೂ ಮುನ್ನ ಶಾಸಕ ಎಚ್.ಕೆ. ಪಾಟೀಲ ಅವರು ಜ್ಯೋತಿ ಬೆಳಗಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಎಚ್.ಸಿ.ಇ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕ ಡಿ.ಜಿ. ಜೋಗಣ್ಣನವರ ಮಾತನಾಡಿ, “ಭಾರತ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಹಕ್ಕುಗಳನ್ನು ಕಲ್ಪಿಸಿಕೊಟ್ಟಿದೆ. ಸಂವಿಧಾನವು ಕೇವಲ ಆಡಳಿತ ನಡೆಸುವ ಮಾರ್ಗಸೂಚಿಯಲ್ಲ, ಬದಲಾಗಿ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ಧರಿಸುವ ಮಹತ್ವದ ಕಾನೂನು ಗ್ರಂಥವಾಗಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.
“ಭಾರತ ಸಂವಿಧಾನ ದಿನಾಚರಣೆಯು ಸಂವಿಧಾನದ ಮಹತ್ವವನ್ನು ಸ್ಮರಿಸುವುದರ ಜೊತೆಗೆ ಅದರ ಆಶಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆ ನೀಡುವ ದಿನವಾಗಿದೆ. ಪ್ರತಿಯೊಬ್ಬರೂ ಸಂವಿಧಾನದ ತತ್ವಗಳನ್ನು ಗೌರವಿಸಿ, ದೇಶದ ಪ್ರಗತಿ, ಏಕತೆ ಮತ್ತು ಸಮಗ್ರ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು” ಎಂದು ಡಿ.ಜಿ. ಜೋಗಣ್ಣನವರ ಅಭಿಪ್ರಾಯಪಟ್ಟರು.
ಶರೀಷ್ ಬಿಳಿಯಲಿ ಹಾಗೂ ತಂಡದವರು ಸಂವಿಧಾನ ಜಾಗೃತಿ ಗೀತೆಯನ್ನು ಪ್ರಸ್ತುತಪಡಿಸಿದರು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ವಡೆಯಮಲ್ಲಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ವಂದೇ ಮಾತರಂ ಹಾಗೂ ನಾಡಗೀತೆ ಪ್ರಸ್ತುತ ಪಡಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ.ನಂದಾ ಹಣಬರಹಟ್ಟಿ ಸರ್ವರನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನು ಪ್ರೊ. ಬಾಹುಬಲಿ ಜೈನರು ನಿರೂಪಿಸಿ ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಎಸ್.ಎನ್. ಬಳ್ಳಾರಿ, ಬಸವರಾಜ ಕಡೇಮನಿ, ಪ್ರೊ. ಸಂಗಮೇಶ್, ಅನಂತ ಸಿಂಗಾಡಿ, ಮಾರ್ತಾಂಡಪ್ಪ ಹಾದಿಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



