ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಜಿಲ್ಲೆಯ ಪ್ರತಿ ಗ್ರಾಮಕ್ಕೂ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಡಾ. ಎಚ್.ಕೆ ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಹೆಸ್ಕಾಂ ಹಾಗೂ ಜಿಲ್ಲಾ ಮಟ್ಟದ ಪ್ರಮುಖ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. “ಗದಗ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದ ವಾಸಿಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಆಯಾ ವ್ಯಾಪ್ತಿಯ ಹೆಸ್ಕಾಂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ರೈತರ ಬೆಳೆಗೆ ನೀರು ಪೂರೈಸಲು ನಿರಂತರ ಏಳು ಗಂಟೆ ಕಾಲ ತ್ರಿ-ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು” ಎಂದು ಹೇಳಿದರು.
“ಮಳೆಯ ಕೊರತೆಯಿಂದಾಗಿ ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿದೆ. ವಿದ್ಯುತ್ ಉತ್ಪಾದನೆಯಲ್ಲಿಯೂ ಸಹ ಕೊರತೆ ಎದುರಾಗಿದೆ. ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಸರ್ಕಾರದ ಹಂತದಲ್ಲಿ ಪ್ರಯತ್ನ ನಿರಂತರವಾಗಿ ನಡೆದಿದೆ. ಸಧ್ಯದಲ್ಲೇ ವಿದ್ಯುತ್ ಖರೀದಿಸಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗವುದು. ಅಲ್ಲಿಯವರೆಗೂ ಸಾರ್ವಜನಿಕರು, ರೈತ ಸಮುದಾಯ ಸಹನೆಯಿಂದ ಇರುವಂತೆ ಅಧಿಕಾರಿಗಳು ಮನವರಿಕೆ ಮಾಡಬೇಕು” ಎಂದು ತಿಳಿಸಿದರು.
ರೋಣ ಶಾಸಕ ಜಿ.ಎಸ್.ಪಾಟೀಲ ಮಾತನಾಡಿ,. “ಈ ಹಿಂದೆ ದಿನದ ಇಪ್ಪತ್ತನಾಲ್ಕು ಗಂಟೆಯೂ ನಿರಂತರ ವಿದ್ಯುತ್ ಪೂರೈಕೆಯಾಗುತ್ತಿತ್ತು. ಸಧ್ಯ ವಿದ್ಯುತ್ ವ್ಯತವ್ಯಯದಿಂದಾಗಿ ಸಾರ್ವಜನಿಕರು ಹಾಗೂ ರೈತರು ತೊಂದರೆಗೊಳಗಾಗಿದ್ದಾರೆ. ಕೂಡಲೇ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.
ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, “ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೈತರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ವಿದ್ಯುತ್ ಪೂರೈಕೆ ಕುರಿತು ನಿಯಮಿತವಾಗಿ ರೈತರಿಗೆ ಮಾಹಿತಿ ನೀಡಬೇಕು” ಎಂದರು.
ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ ರೋಶನ ಮಾತನಾಡಿ, “ಗದಗ ಜಿಲ್ಲೆಗೆ ಪ್ರತಿದಿನ 160 ಮೆಗಾ ವ್ಯಾಟ್ ವಿದ್ಯುತ್ ಅಗತ್ಯವಿದೆ. ತಿಂಗಳಿಗೆ 50 ಮಿಲಿಯನ್ ಯುನಿಟ್ ಪೂರೈಕೆ ಮಾಡಬೇಕಿದೆ. ಸಧ್ಯ ಮಳೆ ಅಭಾವದಿಂದಾಗಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ. ಇದರಿಂದಾಗಿ ಜಿಲ್ಲೆಗೆ ಪ್ರತಿದಿನ 60-70 ಮೆಗಾವ್ಯಾಟ್ ವಿದ್ಯುತ್ ಪೂರೈಸಲಾಗುತ್ತಿದೆ” ಎಂದರು.
ಸಭೆಯಲ್ಲಿ ಗದಗ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಾಜೇಶ ಕಲ್ಯಾಣಶೆಟ್ಟರ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಡಿ.ವಾಯ್.ಎಸ್ಪಿ. ಸಂಕದ, ಕೆ.ಪಿ.ಟಿ.ಸಿ.ಎಲ್ ಕಾರ್ಯಪಾಲಕ ಅಭಿಯಂತರ ರಮೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.