ಏಪ್ರಿಲ್ 18 ಮತ್ತು 19 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸುಗಮ ಹಾಗೂ ಸುಲಲಿತವಾಗಿ ನಡೆಸುವಂತೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ಸೂಚಿಸಿದ್ದಾರೆ.
ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸುಗಮ ನಿರ್ವಹಣೆ ಸಂಬಂಧ ಅಧಿಕಾರಿಗಳ ಜತೆ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾವುದೇ ರೀತಿ ಗೊಂದಲಕ್ಕೆ ಅವಕಾಶ ಮಾಡದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
“ಜಿಲ್ಲೆಯಲ್ಲಿ ಬಿಸಿಗಾಳಿ ಇರುವುದರಿಂದ ಪರೀಕ್ಷಾ ಕೊಠಡಿಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಜತೆಗೆ ಗಾಳಿ ಬೆಳಕು ಇರುವಂತೆ ನೋಡಿಕೊಳ್ಳಬೇಕು. ಅಂತೆಯೇ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನ ಹರಿಸಬೇಕು. ಶಿಸ್ತು ಕಾಪಾಡಬೇಕು” ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಪರೀಕ್ಷಾ ಕೇಂದ್ರಗಳ ವಿವರ : ಗದಗ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಚ್‌ಸಿಇಎಸ್ ಪದವಿ ಪೂರ್ವ ಕಾಲೇಜು, ಕೆವಿಎಸ್‌ಆರ್ ಪದವಿ ಪೂರ್ವ ಕಾಲೇಜು, ತೋಂಟದ ಸಿದ್ಧೇಶ್ವರ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜು, ವಿದ್ಯಾದಾನ ಸಮಿತಿ ಬಾಲಕರ ಪದವಿ ಪೂರ್ವ ಕಾಲೇಜು, ಬೆಟಗೇರಿಯ ಎಎಸ್‌ಎಸ್ ಪದವಿ ಪೂರ್ವ ಕಾಲೇಜು, ನಗರದ ಮೈಲಾರಪ್ಪ ಮೆಣಸಗಿ ಪದವಿ ಪೂರ್ವ ಕಾಲೇಜು, ಜಗದ್ಗುರು ತೋಂಟದಾರ್ಯ ಪದವಿ ಪೂರ್ವ ಕಾಲೇಜು, ಲೋಯೊಲಾ ಪದವಿ ಪೂರ್ವ ಕಾಲೇಜು, ವಿದ್ಯಾದಾನ ಸಮಿತಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸನ್ಮಾರ್ಗ ಪದವಿ ಪೂರ್ವ ಕಾಲೇಜು, ಕರ್ನಾಟಕ ಪದವಿ ಪೂರ್ವ ಕಾಲೇಜು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ನಾಗಜ್ಯೋತಿ ಬಿ ಎನ್ ನಾಮಪತ್ರ ಸಲ್ಲಿಕೆ
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕುರ್ತಕೋಟಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಇತರರು ಇದ್ದರು.
