ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಯು ‘ಥರ್ಡ ಐ’ ಯೋಜನೆ ಜಾರಿಗೊಳಿಸುತ್ತಿದೆ. ಇದರಿಂದ ನಗರಗಳಲ್ಲಿ ಸಾರಿಗೆ ಸಂಚಾರ ವ್ಯವಸ್ಥೆಯಲ್ಲಿ ಬಹುದೊಡ್ಡ ಬದಲಾವಣೆ ಸಾಧ್ಯವಾಗಲಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಡಾ.ಎಚ್.ಕೆ ಪಾಟೀಲ್ ಹೇಳಿದ್ದಾರೆ.
ಗದಗದಲ್ಲಿ ಸಂಚಾರ ವ್ಯವಸ್ಥೆ ನಿರ್ವಹಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ‘ಥರ್ಡ ಐ’ ಕಾರ್ಯವೈಖರಿಯನ್ನು ಅವರು ವೀಕ್ಷಿಸಿದರು. ಥರ್ಡ್ ಐ ತಂತ್ರಜ್ಞಾನದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, “ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿ ಈಗಾಗಲೇ ಅತ್ಯಾಧುನಿಕ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮೊದಲ ಮಹಡಿಯಲ್ಲಿ ‘ಥರ್ಡ ಐ’ ನಿಯಂತ್ರಣಾ ಕೊಠಡಿ ತೆರೆಯಲಾಗಿದೆ. ನಿರಂತರ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳ ಬಗ್ಗೆ ವೀಕ್ಷಿಸಲಾಗುತ್ತಿದೆ” ಎಂದರು.
“ನಿಯಂತ್ರಣ ಕೊಠಡಿಗೆ ಪೊಲೀಸ್ ಇಲಾಖೆಯಲ್ಲಿ ತಾಂತ್ರಿಕ ಪದವಿ ಪಡೆದ ನುರಿತ ಅಧಿಕಾರಿಗಳನ್ನು ನಿಯೋಜಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಇದರಿಂದ ಸಂಚಾರಿ ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ದಂಡ ಹಾಗೂ ಶಿಕ್ಷೆಗೆ ಗುರಿಪಡಿಸಲಾಗುತ್ತದೆ” ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ವಾರ್ತಾಧಿಕಾರಿ ವಸಂತ ಮಡ್ಲೂರ, ಪೊಲೀಸ್ ಇಲಾಖೆಯ ಡಿ.ವಾಯ್.ಎಸ್.ಪಿ, ಸಿ.ಪಿ.ಆಯ್ ಸೇರಿದಂತೆ ಗಣ್ಯರುಗಳಾದ ಪ್ರಭು ಬುರಬುರೆ, ಸಿದ್ದು ಪಾಟೀಲ ಉಪಸ್ಥಿತರಿದ್ದರು.