ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಲಕ್ಕುಂಡಿ ಗ್ರಾಮದ ಬಸವಣ್ಣೆಪ್ಪ ಭರಮಪ್ಪ ಮಾಡಲಗೇರಿ (62) ಹತ್ಯೆಯಾದವರು. ಅ.9ರಂದು ರಾತ್ರಿ ಜಮೀನಿನಿಂದ ಮನೆಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕತ್ತು ಸೀಳಿ, ತಲೆಗೆ ಬಲವಾಗಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹತ್ಯೆ ನಡೆಸಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್, ಡಿವೈಎಸ್ಪಿ ಮುರ್ತುಜ್ ಖಾದ್ರಿ ಹಾಗೂ ಸಿಪಿಐ ಸಿದ್ದಲಿಂಗೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ದಾಖಲೆಯ ಪ್ರಕಾರ, ಅ.9ರಂದು ರಾತ್ರಿ 7.30ರಿಂದ 10 ಗಂಟೆಯ ಅವಧಿಯಲ್ಲಿ ಹತ್ಯೆ ನಡೆದಿದೆ ಎನ್ನಲಾಗಿದ್ದು, ಅ.10ರಂದು ಮಧ್ಯರಾತ್ರಿ 12.30ಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.




