ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷರು ಮುತ್ತಣ್ಣ ಶಿವಳ್ಳಿ ಅವರು ಗದಗ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಮುತ್ತಣ್ಣ ಶಿವಳ್ಳಿ ಅವರು, ನೀಟ್ ಪರೀಕ್ಷೆಯು ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಪರೀಕ್ಷೆಯಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ತಂದಿವೆ” ಎಂದು ಆತಂಕ ವ್ಯಕ್ತಪಡಿಸಿದರು.
“ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಾದರೆ ಉನ್ನತ ಮಟ್ಟದ ತನಿಖೆ ನಡೆಸಿ, ಹಗರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಯಾವುದೇ ಒತ್ತಡಕ್ಕೂ ಮಣಿಯದೆ ಕಾನೂನು ಕ್ರಮ ಜರುಗಿಸಬೇಕು” ಎಂದು ಅವರು ಒತ್ತಾಯಿಸಿದರು.
“ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ಸುರಕ್ಷಿತಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಶಿಕ್ಷಣ ವ್ಯವಸ್ಥೆಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರಗಳು ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.





