“ಬದುಕಿನ ಪರಿಪೂರ್ಣತೆಗೆ ಪ್ರತಿಯೊಬ್ಬ ನಾಗರಿಕನು ತಾನು ಯಾವುದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡರೂ ಆ ಕಾರ್ಯದಲ್ಲಿ ಶ್ರೇಷ್ಠತೆಯನ್ನು ಸಾಧಿಸುವ ಗುರಿ ಹೊಂದಿರಬೇಕು. ಕಾರ್ಯನಿಷ್ಠೆ, ನಿರಂತರ ಪರಿಶ್ರಮ ಮತ್ತು ಉನ್ನತ ಮೌಲ್ಯಗಳ ಮೂಲಕ ವ್ಯಕ್ತಿತ್ವವನ್ನು ರೂಪಿಸಿಕೊಂಡಾಗ ಮಾತ್ರ ಬದುಕು ಮೌಲ್ಯಯುತ ಹಾಗೂ ಸುಂದರವಾಗಲು ಸಾಧ್ಯ” ಎಂದು ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಹೇಳಿದರು.
ಗದಗ ಜಿಲ್ಲೆಯ ರೋಣ ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವಿ.ಎಂ.ನಾಡಗೌಡ ಕಾನೂನು ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
“ಶಿಕ್ಷಣವೆಂದರೆ ಕೇವಲ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗಬಾರದು. ಮಾನವೀಯ ಮೌಲ್ಯಗಳನ್ನು ಒಳಗೊಂಡ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಘನತೆಯುತ ಬದುಕು ಕಟ್ಟಿಕೊಳ್ಳಲು ನೆರವಾಗುವುದೇ ನಿಜವಾದ ಶಿಕ್ಷಣವಾಗಿದೆ. ವಿದ್ಯಾರ್ಥಿಗಳು ಸಮಾಜಕ್ಕೆ ಒಳಿತಾಗುವ ರೀತಿಯಲ್ಲಿ ಕಲಿಯಬೇಕು. ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಹೊಂದುವುದರ ಜೊತೆಗೆ ಅದನ್ನು ಸಾಧಿಸಲು ನಿರಂತರ ಪರಿಶ್ರಮ ಪಡಬೇಕು. ವಿಚಾರಶೀಲತೆ ಹಾಗೂ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಂಡು ಇತರರಿಗೆ ಒಳಿತಾಗುವಂತೆ ಬದುಕಬೇಕು. ಇಂತಹ ಮೌಲ್ಯಗಳು ಬದುಕಿನ ಸಾರ್ಥಕತೆಗೆ ಅತ್ಯಗತ್ಯವಾಗಿವೆ” ಎಂದರು.
“ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಮಹಾವಿದ್ಯಾಲಯಗಳ ಸಂಖ್ಯೆ ವಿರಳವಾಗಿದೆ. ಇಂತಹ ಸಂದರ್ಭದಲ್ಲಿ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಕಾನೂನು ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಕಾನೂನು ಮಹಾವಿದ್ಯಾಲಯ ಆರಂಭಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಈ ಸಂಸ್ಥೆಯ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಾನೂನು ಶಿಕ್ಷಣ ಪಡೆಯಲು ಉತ್ತಮ ಅವಕಾಶ ದೊರೆಯಲಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಪರಿಶೀಲನೆ:
ಹಾವೇರಿ, ಕೊಪ್ಪಳ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದ ಲೋಕಾಯುಕ್ತ ಇಲಾಖೆಯ 40ಕ್ಕೂ ಹೆಚ್ಚು ಸಿಬ್ಬಂದಿ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಖರಿಯನ್ನು ಪರಿಶೀಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಸೇವಕರಾಗಿ ಕಾರ್ಯನಿರ್ವಹಿಸುವ ಬದಲು ಸಾರ್ವಜನಿಕರ ಮಾಲೀಕರಂತೆ ವರ್ತಿಸುತ್ತಿರುವುದು ಕಂಡುಬಂದಿದೆ. ಸಾಮಾನ್ಯ ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಹಲವು ಬಾರಿ ಅಲೆದಾಡುವ ಪರಿಸ್ಥಿತಿ ಇರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.
ಸಾರ್ವಜನಿಕರು ಸರ್ಕಾರಿ ಸೇವೆಗಳನ್ನು ಪಡೆಯಲು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿಗೆ ಅಂತ್ಯ ಹಾಡಬೇಕಿದೆ. ಸರ್ಕಾರಿ ಇಲಾಖೆಗಳ ಕಾರ್ಯವೈಖರಿಯಲ್ಲಿ ಸುಧಾರಣೆ ತರುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಅಗತ್ಯವಿರುವಲ್ಲಿ ಶಸ್ತ್ರಚಿಕಿತ್ಸೆಯ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಜನಸ್ನೇಹಿ ಕಾರ್ಯವೈಖರಿ ಮೂಡಿಸಲು ಲೋಕಾಯುಕ್ತ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲ ಮಾತನಾಡಿ, ಭವಿಷ್ಯದಲ್ಲಿ ಯಶಸ್ಸು ಸಾಧಿಸಲು ಸ್ಪಷ್ಟ ಗುರಿ ಹಾಗೂ ಅದನ್ನು ತಲುಪುವ ಕಠಿಣ ಪರಿಶ್ರಮ ಅತ್ಯಂತ ಮುಖ್ಯ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಶಿಕ್ಷಣವೇ ಬುನಾದಿಯಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು, ಬದ್ಧತೆ ಮತ್ತು ಪರಿಶ್ರಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಸಂಸದ ಆರ್.ಎಸ್.ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್.ಪಾಟೀಲ, ಉದ್ಯಮಿ ಸಂಜಯ ನಾಡಗೌಡ, ಡಾ.ಕೆ.ಬಿ.ಧನ್ನೂರ, ಸಿಂಡಿಕೇಟ್ ಸದಸ್ಯೆ ಪದ್ಮಾವತಿ ಮಾನೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಉಪನ್ಯಾಸಕ ಅಕ್ಷಯ ಪಾಟೀಲ ನಿರೂಪಿಸಿ, ಸ್ವಾಗತಿಸಿದರು. ಪ್ರಾಚಾರ್ಯ ಡಿ.ಬಿ.ನರಗುಂದ ವಂದಿಸಿದರು.




