ಕರ್ನಾಟಕದಲ್ಲಿ ಖಾಸಗಿ ಕೈಗಾರಿಕಾ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ವಿಕಾಸ ರಂಗದ ಜಿಲ್ಲಾಧ್ಯಕ್ಷ ಮಲ್ಲೇಶ ಮಣ್ಣಮ್ಮನವರ ನೇತೃತ್ವದಲ್ಲಿ ಪತ್ರ ಚಳುವಳಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗೌರವಾಧ್ಯಕ್ಷರು ಬಸವರಾಜ ಹಿರೇಮನಿ ಅವರು ಮಾತನಾಡಿ, “ಕನ್ನಡ ನೆಲದಲ್ಲಿ ಕನ್ನಡಿಗರು ಉದ್ಯೋಗ ಪಡೆಯುವಲ್ಲಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ ಎಂದರು.
ಕೃಷ್ಣ ಲಮಾಣಿ ಪ್ರಾಸ್ತಾವಿಕ ಮಾತನಾಡಿ, “ಕನ್ನಡದ ಮಕ್ಕಳಿಗೆ ಉದ್ಯೋಗ ನೀಡಿ ಇಲ್ಲವಾದರೇ ಮುಂದಿನ ದಿನಗಳಲ್ಲಿ ಈ ಅಂಚೆ ಪತ್ರ ಚಳುವಳಿ ಉಗ್ರ ರೂಪ ತಾಳುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಕರ್ನಾಟಕದಲ್ಲಿ ನೆಲೆಸಿರುವ ಕೈಗಾರಿಕೆಗಳಲ್ಲಿ ಕನ್ನಡದ ಮಕ್ಕಳಿಗೆ ಉದ್ಯೋಗದಲ್ಲಿ ಆದ್ಯತೆ ಸಿಗಬೇಕು. ಕನ್ನಡ ನೆಲದಲ್ಲಿ ಹುಟ್ಟಿ ಬೆಳೆದ ಯುವಕರಿಗೆ ಇಲ್ಲಿಯೇ ಉದ್ಯೋಗ ಸಿಗದೆ ಹೊರ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ಸರ್ಕಾರ ಕೂಡಲೇ ಖಾಸಗಿ ಕೈಗಾರಿಕಾ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಕಾನೂನನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.
“ಕನ್ನಡ ಭಾಷೆ, ಕನ್ನಡಿಗರ ಉದ್ಯೋಗ ಮತ್ತು ಕನ್ನಡ ನಾಡಿನ ಹಿತರಕ್ಷಣೆಗಾಗಿ ಈ ಚಳುವಳಿಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು” ಎಂದು ಕಾರ್ಯಕರ್ತರು ಹೇಳಿದರು.
ಕಾರ್ಯಕ್ರಮದಲ್ಲಿ ಎಲ್ಲರು ಅಂಚೆ ಪತ್ರಗಳನ್ನು ಹಿಡಿದು, ‘ಕನ್ನಡದ ಮಕ್ಕಳಿಗೆ ಕರ್ನಾಟಕದಲ್ಲಿ ಉದ್ಯೋಗ ಸಿಗಲಿ, ಕಾನೂನು ಜಾರಿಯಾಗಲಿ’ ಎಂಬ ಘೋಷಣೆಗಳನ್ನು ಕೂಗಿದರು. ನಂತರ ಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪತ್ರ ಚಳುವಳಿಯಲ್ಲಿ ಅನೇಕ ಕಾರ್ಯಕರ್ತರು ಹಾಗೂ ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.



