ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳಿಗೆ ಪ್ರತಿ ಸಮಿತಿಯವರು ಕಡ್ಡಾಯವಾಗಿ ಪೋಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ವತಿಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಹೇಳಿದರು.
ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಆಚರಣೆಯ ಸಲುವಾಗಿ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟಂತೆ ಚರ್ಚಿಸಲು ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದ ಅವರು,
ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಧ್ವನಿ ವರ್ಧಕಗಳ ಬಳಕೆಗೆ ನಿಷೇಧವಿರುತ್ತದೆ ಎಂದರು. ಗಣೇಶ ಪ್ರತಿಷ್ಠಾನ ಪೆಂಡಾಲ್‌ಗಳಲ್ಲಿ ಸಿ.ಸಿ.ಟಿವಿ ಗಳ ಅಳವಡಿಕೆ, ಬೆಳಕಿನ ವ್ಯವಸ್ಥೆಗಳನ್ನು ಆಯೋಜಕರು ಮಾಡುವುದು ಸೂಕ್ತ ಎಂದ ಅವರು, ಬ್ಯಾನರ್‌ಗಳಲ್ಲಿ ಪ್ರಚೋಧನಾಕಾರಿ ಘೋಷಣೆಗಳನ್ನು ಅಳವಡಿಕೆ ಮಾಡುವಂತಿಲ್ಲ. ಬ್ಯಾನರ್‌ಗಳ ಅಳವಡಿಕೆಗೆ ಸೂಕ್ತ ಪ್ರಾಧಿಕಾರದ ಅನುಮತಿ ಪಡೆಯಬೇಕು ಎಂದರು.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಎಎಸ್‌ಪಿ ಸುಧಾಕರ್ ನಾಯಕ್, ಸಹಾಯಕ ಕಮೀಷನರ್ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.