ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡುವ ಕುರಿತು ಚರ್ಚೆಗಳು ಆರಂಭವಾಗಿರುವ ಬೆನ್ನಲ್ಲೇ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾತನಾಡಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಹೇಳಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಪ್ರವಾಸಿ ಮಂದಿರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಚಿಂತನೆ ನಡೆಸಲಾಗಿದೆ.
ಕೃಷಿ ಇಲಾಖೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದ್ದ ಅವರು, ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಢವಾಗಿ , ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಹೇಳಿದ್ದರು ಎಂದರು.
ಸಚಿವ ಮಧು ಬಂಗಾರಪ್ಪ ಮುಂದುವರೆದು, ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕೈಗೊಂಡಿದೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಸೇರಿದಂತೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ.
ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹೊರಯಾಗದಂತೆ ತಪ್ಪಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ಶಾಲೆಗಳು ಇದ್ದು, ಈ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಹಳೆ ಶಾಲೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನೆಲದಲ್ಲಿ ಕೂರಬಾರದು. ಶಾಲೆಗಳಿಗೆ ಡೆಸ್ಕ್, ಬೆಂಚ್ ಇತರೆ ಸಾಮಾಗ್ರಿಗಳನ್ನು ವಿತರಿಸಲಾಗುವುದು ಎಂದರು
ಹೊಸ ತಾಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇಮಕಾತಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ ಕೊರತೆ ಇರುವುದರಿಂದ ನೇಮಕ ಮಾಡಿಲ್ಲ. ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.