ಬೀದರ್ ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪ್ರಥಮ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
“ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಯಾವುದೇ ಸಮಸ್ಯೆಗಳು ಕಂಡುಬಂದರೆ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕು” ಎಂದು ಸೂಚಿಸಿದರು.
“ಸಂಬಂಧಪಟ್ಟ ಗ್ರಾಮಗಳಲ್ಲಿ ಖಾಸಗಿ ಬೋರವೆಲ್‌ಗಳನ್ನು ಬಾಡಿಗೆ ಪಡೆಯಬೇಕು. ಖಾಸಗಿಯಾಗಿ ಲಭ್ಯ ಇಲ್ಲದಿದ್ದರೆ ಕೂಡಲೇ ಟ್ಯಾಂಕರ್ ಮಾಲೀಕರಿಂದ ಕೊಟೆಶನ್ ಪಡೆದು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈಗಾಗಲೇ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ನೀರಿನ ಟ್ಯಾಂಕರ್ ಬಾಡಿಗೆ ಪಡೆದು ಕುಡಿಯುವ ನೀರು ಸರಬರಾಜು ಮಾಡುತ್ತಿದ್ದು, ಟ್ಯಾಂಕರ್ ಮಾಲೀಕರಿಗೆ 15 ದಿನಕೊಮ್ಮೆ ಬಾಡಿಗೆ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು. ಅದೇ ರೀತಿಯಾಗಿ ಬಾಡಿಗೆ ಪಡೆದ ಖಾಸಗಿ ಬೋರವೆಲ್ ಮಾಲೀಕರಿಗೂ ಸಹ ಬಾಡಿಗೆ ಪಾವತಿಸುವ ಕ್ರಮಕೈಗೊಳ್ಳಬೇಕೆಂದು ಸಂಬಂಧಪಟ್ಟ ತಹಸೀಲ್ದಾರ್‌ಗಳಿಗೆ ಸೂಚಿಸಿದರು.
ಬಸವಕಲ್ಯಾಣ, ಭಾಲ್ಕಿ, ಕಮಲನಗರ ತಾಲೂಕುಗಳಲ್ಲಿ ಹಲವೆಡೆ ಮೋಟಾರ್ ಮತ್ತು ಪೈಪ್ ಲೈನ್ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಅದರ ಬಿಲ್‌ಗಳ ಪಾವತಿಗೆ ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಮಾತನಾಡಿ, “ಈಗಾಗಲೇ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಮುಂಜಾಗ್ರತೆ ಕ್ರಮಗಳನ್ನು ವಹಿಸಿಕೊಳ್ಳಲಾಗಿದ್ದು, ಕೆಲವೊಂದು ಗ್ರಾಮಗಳಲ್ಲಿ ಬೋರವೆಲ್ ಕೊರೆಸಿ ಪೈಪ್‌ಲೈನ್ ಅಳವಡಿಸಲು ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳ್ಳುವಂತೆ ಅಧಿಕಾರಿಗಳು ಕ್ರಮವಹಿಸಬೇಕು” ಎಂದರು.
“ಅದೇ ರೀತಿ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ, ವಸತಿ ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು” ಎಂದು ಜಿಲ್ಲಾ ಪಂಚಾಯತ್ ಸಿಇಓ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ನಾಲ್ವರ ವಿರುದ್ಧ ಪ್ರಕರಣ ದಾಖಲು
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಮೇಶ್ವರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.