ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲೇ ಶೈಕ್ಷಣಿಕ ನಗರಿ, ಕಲ್ಪತರುನಾಡಿನಲ್ಲಿ 11 ದಿನಗಳ ಕಾಲ ಹಲವು ವೈಶಿಷ್ಟ್ಯಗಳೊಂದಿಗೆ ಹಮ್ಮಿಕೊಂಡಿರುವ ತುಮಕೂರು ದಸರಾ ಉತ್ಸವಕ್ಕೆ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು.
ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೋಮವಾರ ಕನ್ನಡ ಬಾವುಟ ಹಾಗೂ ತುಮಕೂರು ದಸರಾ 2025ರ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ನಾದಸ್ವರದೊಂದಿಗೆ ಭೂಮಿ ಪೂಜೆ, ನಂದಿಧ್ವಜ ಪೂಜೆ ನೆರವೇರಿಸಲಾಯಿತು. ಮೈಸೂರಿನ ಅರಮನೆಯಂತೆ ನಿರ್ಮಿಸಲಾಗಿರುವ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಮಹಾ ಸ್ವಾಮೀಜಿಯವರ ದಸರಾ ಧಾರ್ಮಿಕ ಮಹಾಮಂಟಪವನ್ನು ಉದ್ಘಾಟಿಸಿ, ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಬ್ರಾಹ್ಮಿ ಮುಹೂರ್ತದಲ್ಲಿ ಗಂಗಾಪೂಜೆ, ಗೋಪೂಜೆ, ಯಾಗಶಾಲಾ ಪ್ರವೇಶ, ಗಣಪತಿ ಪೂಜೆ, ಪುಣ್ಯಾಹ, ಭೂಮಿಪೂಜೆ, ಪ್ರಧಾನ ಕಳಶಾರಾಧನೆ, ದೇವಿಗೆ ಪಂಚಾಮೃತ ಅಭಿಷೇಕ, ಅಗ್ನಿ ಪ್ರತಿಷ್ಠಾಪನೆ, ಗಣಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ, ಶ್ರೀ ದುರ್ಗಾ ಹೋಮ, ನವಶಕ್ತಿ ಹೋಮ, ಲಘು ಪೂರ್ಣಾಹುತಿ, ಅಷ್ಠಾವದಾನ ಸೇವೆ, ಮಂತ್ರಪುಷ್ಪ, ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶೈಲಪುತ್ರಿ ಅಲಂಕಾರದಲ್ಲಿ ದೇವಿಯನ್ನು ಪೂಜಿಸಲಾಯಿತು.
ಪೂಜಾ ವಿಧಿ ವಿಧಾನಗಳಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ದಂಪತಿ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ, ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ಗ್ರಾಮಾಂತರ ಶಾಸಕ ಸುರೇಶ್ ಗೌಡ, ಕುಣಿಗಲ್ ಶಾಸಕ ಡಾ. ಹೆಚ್.ಡಿ. ರಂಗನಾಥ್, ಶಿರಾ ಶಾಸಕ ಟಿ.ಬಿ. ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾನಗರ ಪಾಲಿಕೆಯ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಸೇರಿದಂತೆ ಹಲವರು ಹಾಜರಿದ್ದರು.