ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಸೆ.15 ರಂದು ಬೃಹತ್ ಮಾನವ ಸರಪಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ಕರೆ ನೀಡಿರುವ ಹಿನ್ನಲೆ ತಾಲ್ಲೂಕಿನ ಸಾರ್ವಜನಿಕರ ಸಂಪೂರ್ಣ ಸಹಕಾರ ಅಗತ್ಯವಿದೆ ಎಂದು ತಹಶೀಲ್ದಾರ್ ಬಿ.ಆರತಿ ಮನವಿ ಮಾಡಿದರು.
ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಶಿರಾ ತಾಲ್ಲೂಕು ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲ್ಲೂಕು ನಂದಿಹಳ್ಳಿ ಗ್ರಾಮದವರೆಗೆ 90 ಕಿಮೀ ದೂರ ಮಾನವ ಸರಪಳಿ ನಿರ್ಮಿಸಿ ಪ್ರಜಾ ಪ್ರಭುತ್ವ ಬಗ್ಗೆ ಜಾಗೃತಿ, ಎಲ್ಲರಿಗೂ ಪರಿಚಯ ಮಾಡುವ ನಿಟ್ಟಿನಲ್ಲಿ ಆಯೋಜಿಸಲಾಗಿದೆ ಎಂದು ವಿವರಿಸಿದರು.
ಒಟ್ಟು 90 ಕಿಮೀ ಮಾನವ ಸರಪಳಿಗೆ ಒಂದು ಕಿಮೀಗೆ ಒಂದು ಸಾವಿರ ಮಂದಿ ಲೆಕ್ಕದಲ್ಲಿ ಒಟ್ಟು 90 ಸಾವಿರ ಮಂದಿ ಸೇರಿಸುವ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿಗೆ ನೀಡಿರುವ ಸೂಚನೆಯಂತೆ ಗುಬ್ಬಿ ತಾಲ್ಲೂಕು ಮೂಲಕ ನಿರೀಕ್ಷೆಗಿಂತ ಹೆಚ್ಚು ಜನರನ್ನು ಕರೆದೊಯ್ಯಲು ನಿರ್ಧರಿಸಲಾಗಿದೆ. ಹಾಗಾಗಿ ಎಲ್ಲಾ ಸಂಘ ಸಂಸ್ಥೆಗಳನ್ನು ಸಭೆಗೆ ಆಹ್ವಾನಿಸಿ ಸಾರ್ವಜನಿಕ ಕಾರ್ಯಕ್ರಮ ಯಶಸ್ವಿಗೆ ಮನವಿ ಮಾಡಲಾಗಿದೆ ಎಂದರು.
ತಾಪಂ ಇಓ ಶಿವಪ್ರಕಾಶ್ ಮಾತನಾಡಿ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರು ಮಂದಿಯಂತೆ ಸಾರ್ವಜನಿಕರನ್ನು ಆಯಾ ಪಂಚಾಯಿತಿಯಿಂದ ನೇರ ನಿಗದಿತ ಸ್ಥಳಕ್ಕೆ ಕರೆದೊಯ್ಯುವುದು. ಕಾರ್ಯಕ್ರಮ ಮುಗಿದ ಬಳಿಕ ಮರಳಿ ಆಯಾ ಪಂಚಾಯಿತಿಗೆ ಕರೆತರುವ ಜವಾಬ್ದಾರಿಯನ್ನು ಸಮಿತಿ ನಿರ್ವಹಿಸಲಿದೆ ಎಂದ ಅವರು ಪಟ್ಟಣದಲ್ಲಿ ಸಹ ಎರಡು ಬಸ್ಸು ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ವೀಣಾ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿಂದುಮಾಧವ, ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಇಂದ್ರೇಶ್ ಸೇರಿದಂತೆ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
