ಅಂಗನವಾಡಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿಗೆ ದುರುಳನೊಬ್ಬ ಲೈಂಗಿಕ ಕಿರುಕುಳ ನೀಡಿ, ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಎಲೆಹುಂಡಿ ಗ್ರಾಮದ ಅಂಗನವಾಡಿಯಲ್ಲಿ ಗುರುವಾರ ಘಟನೆ ನಡೆದಿದೆ. ಹಲ್ಲೆಗೊಳಗಾಗಿದ್ದ ಶಿಕ್ಷಕಿ ಸುಶೀಲಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೇಲೆ ಎಚ್.ಡಿ ಕೋಟೆ ಪಟ್ಟದ ನಿವಾಸಿ ಬಸವರಾಜು ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಬಸವರಾಜು ಏಕಾಏಕಿ ಅಂಗನವಾಡಿಗೆ ನುಗ್ಗಿದ್ದು, “ನನಗೆ ನೀನು ಬೇಕು. ನಿನ್ನನ್ನು ಅನುಭವಿಸಬೇಕು” ಶಿಕ್ಷಕಿಗೆ ಅಶ್ಲೀಲವಾಗಿ ಮಾತನಾಡಿದ್ದಾನೆ. ಶಿಕ್ಷಕ್ಷಿಯನ್ನು ಎಳೆದಾಡಿದ್ದಾನೆ.
ಶಿಕ್ಷಕಿ ಪ್ರತಿರೋಧ ವ್ಯಕ್ತಪಡಿಸಿದಾಗ, ಆಕೆಯ ಕಪಾಳಕ್ಕೆ ಹೊಡೆದಿದ್ದಾನೆ. ಆರೋಪಿಯ ಹಲ್ಲೆಯಿಂದ ಶಿಕ್ಷಕಿ ಪ್ರಜ್ಞೆ ತಪ್ಪಿದ್ದಾರೆ. ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಗ್ರಾಮಸ್ಥರು ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ, ಶಿಕ್ಷಕಿಯ ಆರೋಗ್ಯ ವಿಚಾರಿಸಿದ್ದಾರೆ. ಎಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.