ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ.
ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು ನಗರದ ಎಂಜಿ ರಸ್ತೆಯ ಬಿಜಿಎಸ್ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.

ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಎ ಮಂಜು ಅವರು ಹನ್ಯಾಳು ಗ್ರಾಮದಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಮತ ಚಲಾಯಿಸಿದ್ದಾರೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ ಶಿವಲಿಂಗೇಗೌಡ ಅವರು ಮತದಾನ ಮಾಡಲು ಕುಟುಂಬದೊಂದಿಗೆ ಆಗಮಿಸಿದ್ದು, ಅರಸೀಕೆರೆಯ ಮಾರುತಿ ನಗರದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ.

ಹೊಳೆನರಸೀಪುರ ಕ್ಷೇತ್ರದ ಶಾಸಕ, ಜೆಡಿಎಸ್ ಅಭ್ಯರ್ಥಿ ಎಚ್.ಡಿ ರೇವಣ್ಣ ಮತ್ತವರ ಕುಟುಂಬಸ್ಥರು ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದು, ಸಂಸತ್ ಸದಸ್ಯ ಪ್ರಜ್ವಲ್ ರೇವಣ್ಣ, ಶಾಸಕ ಹೆಚ್.ಡಿ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹಾಗೂ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ ರೇವಣ್ಣ ಮತ ಚಲಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪತ್ನಿ ಚನ್ನಮ್ಮ ಅವರೊಂದಿಗೆ ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.


ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹುಲ್ಲಳ್ಳಿ ಸುರೇಶ್ ಅವರು ತಮ್ಮ ಕುಟುಂಬದೊಂದಿಗೆ ಬಂದು ಬೇಲೂರು ವಾರ್ಡ್ 9ರಲ್ಲಿ ಮತದಾನ ಮಾಡಿದ್ದಾರೆ.

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಮತದಾನ ಮಾಡಿದ್ದು, ಜೆಡಿಎಸ್ ಅಭ್ಯರ್ಥಿ ಎಚ್ ಕೆ ಕುಮಾರಸ್ವಾಮಿ ಅವರು ಕುಟುಂಬ ಸಹಿತ ಮತದಾನ ಮಾಡಿದ್ದಾರೆ.

