ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಅರ್ಹರಿಗೆ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಕರೆ ನೀಡಿದ್ದಾರೆ.
ಹಾಸನದ ಕೆಎಸ್ಆರ್‌ಟಿಸಿಯ ಹೊಸ ಬಸ್ ನಿಲ್ದಾಣದಲ್ಲಿ “ಸರ್ಕಾರದ 2 ವರ್ಷಗಳ ಸಾಧನಾ ಸಂಭ್ರಮ; ಪ್ರಗತಿಯತ್ತ ಕರ್ನಾಟಕ” ವಸ್ತುಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರದ ಸೌಲಭ್ಯಗಳು ಮತ್ತು ಯೋಜನೆಗಳನ್ನು ಜನರಿಗೆ ಈಗಾಗಲೇ ಕಲ್ಪಿಸಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ನಿಟ್ಟಿನಲ್ಲಿ ಪ್ರದರ್ಶನ ಏರ್ಪಡಿಸಲಾಗಿದೆ” ಎಂದರು.
ಮಹಿಳೆಯರನ್ನು ಮಾತನಾಡಿಸಿ ಗೃಹಲಕ್ಷ್ಮಿ ಯೋಜನೆಯಡಿ 2000 ರೂಗಳು, ಅನ್ನಭಾಗ್ಯ ಯೋಜನೆಯಡಿ ಪಡಿತರ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಹಾಗೂ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತವಾಗಿ ಸಂಚಾರ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಅನಿಸಿಕೆ ಪಡೆದರು.

ಇದನ್ನೂ ಓದಿ: ಹಾಸನ | ʼದೇವನಹಳ್ಳಿ ಚಲೋʼ ಹೋರಾಟಗಾರರ ಬಂಧನ ವಿರೋಧಿಸಿ ಪ್ರತಿಭಟನೆ
ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಸೂಚಿಸಿದರಲ್ಲದೆ, ಪ್ರಯಾಣಿಕರ ವಸ್ತುಗಳು ಕಳ್ಳತನವಾಗದಂತೆ ಎಚ್ಚರವಹಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಬಸ್ ವ್ಯವಸ್ಥೆಗೆ ನಿಗಾವಹಿಸಲು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ ಆರ್ ಪೂರ್ಣಿಮಾ, ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್ ಸೇರಿ ಮತ್ತಿತರರು ಹಾಜರಿದ್ದರು.
