ಹಾಸನದಲ್ಲಿರುವ ಹಾಸನಾಂಬ ದೇವಸ್ಥಾನದಲ್ಲಿ ಧರ್ಮ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ಭಕ್ತರು ಆತಂಕಗೊಂಡ ಬಳಿಕ ನೂಕು ನುಗ್ಗಲು ನಡೆದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ವಿದ್ಯುತ್ ಶಾಕ್ ಹೊಡೆದ ಪರಿಣಾಮ ಭಕ್ತರು ಭಯದಿಂದ ಓಡಿದ್ದು, ನೂಕುನುಗ್ಗಲಿನಲ್ಲಿ ಹಲವರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
“ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಶಾಕ್ ಹೊಡೆದಿದೆ ಎಂಬುದು ಗಮನಕ್ಕೆ ಬಂದಿದೆ. ನೂಕುನುಗ್ಗಲಿನಲ್ಲಿ ಕೆಲವರು ಅಸ್ವಸ್ಥರಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಆರೋಗ್ಯವಾಗಿದ್ದಾರೆ” ಎಂದು ಎಸ್‌ಪಿ ತಿಳಿಸಿದ್ದಾರೆ.
ವಿದ್ಯುತ್ ಶಾಕ್ ಘಟನೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ
ಹಾಸನ ಜಿಲ್ಲಾ ಪ್ರವಾಸದಲ್ಲಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನಿಗದಿಪಡಿಸಿದ್ದ ಕಾರ್ಯಕ್ರಮವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಹಾಸನದ ಹಾಸನಾಂಬೆ ದೇವಸ್ಥಾನದಲ್ಲಿ ದರ್ಶನದ ವೇಳೆ ನೂಕುನುಗ್ಗಲು ಉಂಟಾಗಿದ್ದು, ಈ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಷದಿಂದ ಗಾಯಗೊಂಡು ಜಿಲ್ಲಾಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ.
ಓರ್ವ ಬಾಲಕಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದಂತೆ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಗಾಯಾಳುಗಳಿಗೆ… pic.twitter.com/MF909CUL8B
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 10, 2023
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್ ಹೊಡೆದಿದ್ದು ಸ್ಪಷ್ಟವಾಗಿದೆ. ಇದೇ ವೇಳೆ ನೂಕಾಟ ತಳ್ಳಾಟದ ವೇಳೆ ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಎಲ್ಲರೂ ಆರೋಗ್ಯವಾಗಿದ್ದು, ಓರ್ವ ಯುವತಿ ಅಸ್ವಸ್ಥಗೊಂಡಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.