ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ಕೇಂದ್ರ ಸರ್ಕಾರ ರೈತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಈ ಹಿಂದೆ ವಿವಿಧ ರೈತ ಸಂಘಟನೆಗಳ ವತಿಯಿಂದ ದೆಹಲಿಯಲ್ಲಿ ನಡೆದ ಅನಿರ್ದಿಷ್ಟಾವಧಿ ಹೋರಾಟದ ವೇಳೆ ಕೇಂದ್ರ ಸರ್ಕಾರ ತಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ ಕೇವಲ ಭರವಸೆ ನೀಡಿದ ಕೇಂದ್ರ ಸರ್ಕಾರ ಈವರೆಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್ ಆರ್ ನವೀನ್ ಕುಮಾರ್ ತಿಳಿಸಿದರು.
“ಸಾಲಭಾದೆ ಮತ್ತು ಆತ್ಮಹತ್ಯೆಗಳನ್ನು ಕೊನೆಗೊಳಿಸಲು ರೈತರು ಹಾಗೂ ಕೃಷಿ ಕಾರ್ಮಿಕರ ಸಮಗ್ರ ಸಾಲಮನ್ನಾ ಮತ್ತು ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಬೇಕು. ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗಿಕರಣ ಮಾಡಬಾರದು. ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಬಲಪಡಿಸಲು ಎಲ್ಲರಿಗೂ ಗುಣಮಟ್ಟದ ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಬೇಕು” ಎಂದು ಒತ್ತಾಯಿಸಿದರು.
“ಸಮಾಜದಲ್ಲಿ ಕೋಮು ವಿಭಜನೆಯನ್ನು ನಿಲ್ಲಿಸಲು ಮತ್ತು ಅವುಗಳ ಪರಿಣಾಮಕಾರಿ ಅನುಷ್ಠಾನ ಖಚಿತಪಡಿಸಿಕೊಳ್ಳಲು ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕು. ಮಹಿಳಾ ಸಬಲೀಕರಣ ಮತ್ತು ತ್ವರಿತ ನ್ಯಾಯಾಂಗ ವ್ಯವಸ್ಥೆ ಮೂಲಕ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನವನ್ನು ಕೊನೆಗೊಳಿಸಬೇಕು. ಜಾತಿ ಹಾಗೂ ಕೋಮು ತಾರತಮ್ಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು” ಎಂದು ಜಂಟಿ ಸಂಘಟನೆ ಕಾರ್ಮಿಕ ಸಮಿತಿ ಆಗ್ರಹಿಸಿತು.
ಇದನ್ನೂ ಓದಿದ್ದೀರಾ?ಹಾಸನ l ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ: ಸಂಸದ ಶ್ರೇಯಸ್ ಪಟೇಲ್
ಈ ವೇಳೆ ಮುಖಂಡರಾದ ಧರ್ಮೇಶ್, ಪೃಥ್ವಿ, ಮಂಜುನಾಥ್, ರವಿ, ಪುಷ್ಪ, ರಮೇಶ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಇದ್ದರು.