ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತದಲ್ಲಿ ಗಾಯಗೊಂಡು ಹಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದನ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.
ಶನಿವಾರ ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಸಚಿವರು, “ಘಟನೆಯಲ್ಲಿ ಈವರೆಗೆ ಒಂಬತ್ತು ಜನ ಮೃತಪಟ್ಟಿದ್ದಾರೆ. ಸುಮಾರು 20 ಜನ ಇನ್ನೂ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ” ಎಂದು ತಿಳಿಸಿದ್ದರು. ಶನಿವಾರ ಸಂಜೆಯ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಚಂದನ್ ಎಂಬ ಯುವಕ ಮೃತಪಟ್ಟಿದ್ದಾನೆ.
ಇದನ್ನು ಓದಿದ್ದೀರಾ? ಹಾಸನ ದುರಂತ | ಟ್ರಕ್ ಚಾಲಕ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿತ್ತು: ಸಚಿವ ಕೃಷ್ಣ ಬೈರೇಗೌಡ
ಘಟನೆಯಲ್ಲಿ ಗಾಯಗೊಂಡಿರುವ ಇನ್ನೂ 19 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳ ಪೈಕಿ ಕೆಲವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿರುವುದಾಗಿ ಹಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ ಈಗಾಗಲೇ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಿಸಲಾಗಿದ್ದರೆ, ಗಾಯಾಳುಗಳಿಗೆ ತಲಾ 50,000₹ ಪರಿಹಾರ ಘೋಷಿಸಲಾಗಿದೆ.
