ದೇಶದಲ್ಲಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ಮಾಡದಂತೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶ್ರಮಿಕ ವರ್ಗಗಳ ವಿರೋಧಿ ನೀತಿ ಖಂಡಿಸಿ ನಗರ ಹಾಗೂ ಹಾಸನ ಜಿಲ್ಲೆಯ ವಿವಿಧೆಡೆ ಅಖಿಲ ಭಾರತ ಕಾರ್ಮಿಕರ ಸಾರ್ವತ್ರಿಕ ಮುಷ್ಕರ ಹಿನ್ನೆಲೆಯಲ್ಲಿ ಹಲವು ಕಾರ್ಮಿಕ ಸಂಘಟನೆಗಳು ನಡೆಸಿದ ಪ್ರತಿಭಟನೆ ಯಶಸ್ವಿಯಾಗಿ ಜರುಗಿತು.
ಜಿಲ್ಲಾ ಕೇಂದ್ರ ಸೇರಿದಂತೆ ಪ್ರತಿ ತಾಲೂಕು ಕೇಂದ್ರಗಳಲ್ಲೂ ಕರಾಳ ಕಾರ್ಮಿಕ ಸಂಹಿತೆ ವಿರೋಧಿಸಿ ಕಾರ್ಮಿಕರ ಮೆರವಣಿಗೆ, ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಇದೇ ವೇಳೆ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟು ಎನ್.ಆರ್. ವೃತ್ತದಲ್ಲಿ ಮಾನವ ಸರಪಣಿ ರಚಿಸಿ, ರಸ್ತೆ ತಡೆದು ಅಲ್ಲಿಯೇ ಕುಳಿತು ಹೋರಾಟ ಮಾಡುತ್ತಾ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಸೇರಿದಂತೆ ಕೆಲವರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಈ ವೇಳೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮಾತನಾಡಿ, “ದೇಶದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಶ್ರಮಿಕ ಶಕ್ತಿಯನ್ನು ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡಲು ವೇತನ ಸಂಹಿತೆಯಲ್ಲಿ 4 ಕಾನೂನು, ಕೈಗಾರಿಕಾ ಬಾಂಧವ್ಯ ಸಂಹಿತೆಯಲ್ಲಿ 3 ಕಾನೂನು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಯಲ್ಲಿ 13 ಕಾನೂನು ಮತ್ತು ಸಾಮಾಜಿಕ ಭದ್ರತಾ ಸಂಹಿತೆಯಲ್ಲಿ 9 ಕಾನೂನು ಸೇರಿದಂತೆ ಒಟ್ಟು 29 ಕಾನೂನುಗಳನ್ನು 4 ಸಂಹಿತೆಗಳಲ್ಲಿ ರೂಪಿಸಲಾಗಿದೆ. ಇದನ್ನು ಕೂಡಲೇ ಕೈ ಬಿಡಬೇಕು” ಎಂದು ಆಗ್ರಹಿಸಿದರು.

“ದೇಶದಲ್ಲಿ ಅತಿಹೆಚ್ಚು ಅಸಂಘಟಿತ, ಸ್ವೀಂ ಮತ್ತು ಅನೌಪಚಾರಿಕ ಕಾರ್ಮಿಕರನ್ನು ಕಾನೂನು ಗಳಡಿ ತರಬೇಕು ಮತ್ತು ದಿನಕ್ಕೆ 600 ರೂ. ವೇತನ ನಿಗದಿ ಮಾಡಬೇಕೆಂಬ ಕೇಂದ್ರ ಕಾರ್ಮಿಕ ಸಂಘಟನೆಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದೀಗ ಕಾರ್ಮಿಕರ ದುಡಿಯುವ ಅವಧಿ ಹೆಚ್ಚಳ ಮಾಡುವ ಹುನ್ನಾರ ನಡೆಯುತ್ತಿದೆ. ಹೀಗಾಗಿ 8 ಗಂಟೆ ಕೆಲಸ ಅವಧಿ ಕಾಯಂ, ಕೆಲಸಕ್ಕೆ ತಕ್ಕ ವೇತನ ನೀಡಬೇಕು. ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆ ರದ್ದುಪಡಿಸಬೇಕೆಂದು ಆಗ್ರಹಿಸಿದರು. ಎಲ್ಲಾ ಸಂಘಟತ, ಅಸಂಘಟಿತ ಕಾರ್ಮಿಕರಿಗೆ ರಾಷ್ಟ್ರವ್ಯಾಪಿ 26 ಸಾವಿರ ಹಾಗೂ ರಾಜ್ಯವ್ಯಾಪಿ 36 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಕನಿಷ್ಠ ಮಾಸಿಕ 9 ಸಾವಿರ ಪಿಂಚಣಿ ನೀಡಿ ಸಾಮಾಜಿಕ ಭದ್ರತೆ ಖಾತ್ರಿ ಪಡಿಸಬೇಕು. ಎನ್ ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ, ಹಳೆಯ ಪೆನ್‌ಶೆನ್ ನೀತಿ ಮರು ಸ್ಥಾಪಿಸಬೇಕು” ಎಂದು ಆಗ್ರಹಿಸಿದರು.
ಇದನ್ನೂ ಓದಿ: ಹಾಸನ | 21 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ
“ಎಲ್ಲಕ್ಕಿಂತ ಮುಖ್ಯವಾಗಿ ಬೆಲೆ ಏರಿಕೆ ನಿಯಂತ್ರಿಸಬೇಕು. ಆಹಾರ, ಔಷಧಿಗಳು, ಕೃಷಿ ಸಾಮಗ್ರಿ ಮುಂತಾದ ಅಗತ್ಯ ವಸ್ತುಗಳ ಮೇಲಿನ ಜಿಎಸ್ ತೆಗೆಯಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮೇಲಿನ ಕೇಂದ್ರೀಯ ಅಬಕಾರಿ ಸುಂಕ ಇಳಿಸಬೇಕು. ಸಾರ್ವಜನಿಕ ವಿತರಣಾ ವ್ಯವಸ್ಥೆ ಸಾರ್ವತ್ರಿಕರಣಗೊಳಿಸಿ ಆಹಾರ ಭದ್ರತೆ ಖಾತ್ರಿ ಪಡಿಸ ಬೇಕೆಂದು ಒತ್ತಾಯಿಸಿದರು.
ಎಲ್ಲರಿಗೂ ಉಚಿತ ಶಿಕ್ಷಣ, ಆರೋಗ್ಯ, ನೀರು ಮತ್ತು ನೈರ್ಮಲ್ಯದ ಹಕ್ಕು ಹಾಗೂ ವಸತಿ ಖಾತ್ರಿ ಪಡಿಸಬೇಕು. ನೂತನ ಶಿಕ್ಷಣ ನೀತಿ – 2020 ರದುಪಡಿಸಬೇಕು. ಸಂವಿಧಾನದ ಆಶಯಗಳ ಮೇಲಿನ ದಾಳಿ ನಿಲ್ಲಿಸಬೇಕು. ರೈತರ ಒಪ್ಪಿಗೆ ಇಲ್ಲದೆ ಬಲವಂತದ ಭೂ ಸ್ವಾಧೀನ ಹಾಗೂ 3 ಕರಾಳ ಕೃಷಿ ಕಾಯಿದೆ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಎಂ.ಸಿ. ಡೋಂಗ್ರೆ. ಮಧು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಎಸ್.ಎನ್. ಲಕ್ಷ್ಮಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಅರವಿಂದ್, ಎಐಟಿಯುಸಿ ಮುಖಂಡರಾದ ನಾಗರತ್ನ, ಪ್ಲಾಂಟೇಷನ್ ಕಾರ್ಮಿಕರ ಸಂಘದ ಕಾರ್ಯದರ್ಶಿ ಸೌಮ್ಯ, ವಿದ್ಯಾರ್ಥಿ ಸಂಘಟನೆಯ ರಮೇಶ್ ಸೇರಿದಂತೆ ಮೊದಲಾದವರಿದ್ದರು.