ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗುವುದು. ಪ್ರತಿಯೊಂದು ಮತಗಟ್ಟೆಗೂ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿದರೆ ಪರಿಷ್ಕರಣೆ ಪ್ರಕ್ರಿಯೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ. ನಗರದ ಹಾಸನಾಂಬ ಕಲಾಭವನದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು, ಮೇಲ್ವಿಚಾರಕರು, ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಏಜೆಂಟ್ಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ.
ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪೂರ್ವ ಮುದ್ರಿತ ನಮೂನೆಗಳನ್ನು ಎರಡು ಪ್ರತಿಗಳಲ್ಲಿ ವಿತರಿಸಲಿದ್ದಾರೆ. ಮತದಾರರು ನಮೂನೆಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ಇತ್ತೀಚಿನ ಭಾವಚಿತ್ರ ಅಂಟಿಸಿ, ಕಡ್ಡಾಯವಾಗಿ ಸಹಿ ಮಾಡಿ ಒಂದು ಪ್ರತಿಯನ್ನು ಅಧಿಕಾರಿಗಳಿಗೆ ಹಿಂತಿರುಗಿಸಬೇಕು ಎಂದು ತಿಳಿಸಿದರು. ಪ್ರತಿನಿಧಿ ಕಾಯ್ದೆಯಡಿ ಮತದಾರರ ಪಟ್ಟಿ ತಯಾರಿಸುವುದು ಸಂವಿಧಾನಬದ್ಧ ಕರ್ತವ್ಯವಾಗಿದೆ. ದೇಶಾದ್ಯಂತ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಭಾಗವಾಗಿ 2025ರ ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ಹಿಂದಿನ ದಾಖಲೆಗಳೊಂದಿಗೆ ಮ್ಯಾಪಿಂಗ್ ಮಾಡಿ ಜೋಡಿಸಲಾಗುತ್ತಿದೆ. ಯಾವುದೇ ಅರ್ಹ ನಾಗರಿಕ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ಸೂಚಿಸಿದರು.
ಇದನ್ನೂ ಓದಿದ್ದೀರಾ?ಹಾಸನ | ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ; ಶುಭಂ ಶುಕ್ಲ
ಈಗಾಗಲೇ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕದಲ್ಲಿಯೂ ಈ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.




