ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ನಿರ್ಮಿಸಿರುವ ನೂತನ ಆಟೋ ನಿಲ್ದಾಣ ಹಾಗೂ ಟ್ಯಾಕ್ಸಿ ನಿಲ್ದಾಣಗಳನ್ನು ಉದ್ಘಾಟಿಸಿ ಸಕಲೇಶಪುರ ಪಟ್ಟಣವು ಅತ್ಯಂತ ಕಿರಿದಾಗಿದ್ದು, ಹೊಸ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯವಿರುವಷ್ಟು ಸ್ಥಳಾವಕಾಶದ ಕೊರತೆಯಿದೆ. ಹೀಗಾಗಿ ಲಭ್ಯವಿರುವ ಜಾಗವನ್ನು ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರು ಹಾಗೂ ವಾಹನ ಚಾಲಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಹಳೆ ಬಸ್ ನಿಲ್ದಾಣದ ಸಮೀಪ ಆಟೋ ಚಾಲಕರಿಗೆ ನೂತನ ಆಟೋ ನಿಲ್ದಾಣ ನಿರ್ಮಿಸಲಾಗಿದ್ದು, ಇದರಿಂದ ರಸ್ತೆಯ ಬದಿಯಲ್ಲಿ ಬಿಸಿಲು ಹಾಗೂ ಮಳೆಯಲ್ಲಿ ವಾಹನಗಳನ್ನು ನಿಲ್ಲಿಸುವ ಪರಿಸ್ಥಿತಿ ತಪ್ಪಲಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಸುಮಾರು 25 ವರ್ಷಗಳ ನಂತರ ಇದೇ ಸ್ಥಳದಲ್ಲಿ ನೂತನ ಆಟೋ ನಿಲ್ದಾಣ ನಿರ್ಮಾಣವಾಗಿರುವುದು ಸಂತಸ ತಂದಿದೆ. ಇಷ್ಟು ವರ್ಷಗಳ ಕಾಲ ರಸ್ತೆಯ ಬದಿಯಲ್ಲಿ ಬಿಸಿಲು ಹಾಗೂ ಮಳೆಯನ್ನು ಲೆಕ್ಕಿಸದೆ ಆಟೋಗಳನ್ನು ನಿಲ್ಲಿಸಬೇಕಾಗಿತ್ತು. ಇದೀಗ ಸುಸಜ್ಜಿತ ನಿಲ್ದಾಣ ನಿರ್ಮಾಣವಾಗಿರುವುದರಿಂದ ಚಾಲಕರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಆಟೋ ಚಾಲಕರು ತಿಳಿಸಿದರು.
ಶಾಸಕ ಸಿಮೆಂಟ್ ಮಂಜು ಅವರ ಪ್ರಯತ್ನದಿಂದ ಆಟೋ ಹಾಗೂ ಟ್ಯಾಕ್ಸಿ ಚಾಲಕರ ಬಹುದಿನಗಳ ಸಮಸ್ಯೆಗೆ ಪರಿಹಾರ ದೊರೆತಿದೆ. ಮುಂದಿನ ದಿನಗಳಲ್ಲಿಯೂ ಚಾಲಕರ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿ ಎಂದರು.
ಇದನ್ನೂ ಓದಿದ್ದೀರಾ?ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ
ಈ ವೇಳೆ ಹಿಂದೂ ಮುಖಂಡ ರಘು, ಮಲೆನಾಡು ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ಟ್ಯಾಕ್ಸಿ ಸಂಘದ ಅಧ್ಯಕ್ಷ ಗಣೇಶ್ ಆಟೋ ಚಾಲಕರ ಸಂಘದ ಅಧ್ಯಕ್ಷ ಯೋಗೇಶ್ ಪದಾಧಿಕಾರಿಗಳು ಸೇರಿದಂತೆ ಚಾಲಕರು ಹಾಗೂ ವಿವಿಧ ಸಂಘಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.




